ಗ್ರಾಮೀಣ ಸೇವೆಯಡಿಯಲ್ಲಿ 4 ಸಾವಿರ ವೈದ್ಯರನ್ನು ನೇಮಕ ಮಾಡಿಕೊಳ್ಳುತ್ತಿದೆ: ಸಚಿವ ಡಾ. ಕೆ ಸುಧಾಕರ್

ಬೆಂಗಳೂರು

ಬೆಂಗಳೂರು: ಗ್ರಾಮೀಣ ಸೇವೆಯಡಿಯಲ್ಲಿ 4 ಸಾವಿರ ವೈದ್ಯರನ್ನು ನೇಮಕ ಮಾಡಿಕೊಳ್ಳುತ್ತಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ. ಈ ಸಂಬಂಧ ವಿಧಾನಸಭೆಯಲ್ಲಿ ಶಾಸಕ ಯು. ರಾಜೇಶ್ ನಾಯಕ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಕಡ್ಡಾಯ ಗ್ರಾಮೀಣ ಸೇವೆಯಡಿಯಲ್ಲಿ 4 ಸಾವಿರ ವೈದ್ಯರನ್ನು ನೇಮಕ ಮಾಡಿಕೊಳ್ಳುತ್ತಿದ್ದು, ನೇಮಕಗೊಂಡ ವೈದ್ಯರನ್ನು ಕೌನ್ಸಿಲಿಂಗ್ ಮೂಲಕ ಸ್ಥಳ ನಿಯೋಜನೆ ಮಾಡಲಾಗುತ್ತದೆ.

ಕೊರತೆಯಿರುವ ತಾಲೂಕು ಆಸ್ಪತ್ರೆಗಳಿಗೆ ತಜ್ಞ ವೈದ್ಯರನ್ನು ನಿಯೋಜಿಸಲಾಗುವುದು ಎಂದರು. ಬಂಟ್ವಾಳ ತಾಲೂಕು ಆಸ್ಪತ್ರೆಯಲ್ಲಿ ಅರವಳಿಕೆ ತಜ್ಞರ ಹುದ್ದೆ ಖಾಲಿಯಿದ್ದು, ಅನ್ಯತಾ ಸೇವೆ ಮೇಲೆ ಕಾರ್ಯ ನಿರ್ವಹಿಸಲು ಸೂಚಿಸಲಾಗಿದೆ. ಇಲಾಖೆಯಲ್ಲಿ ಖಾಲಿ ಇರುವ 400 ಫಾರ್ಮಾಸಿಸ್ಟ್, 150 ಕಿರಿಯ ಪ್ರಯೋಗ ಶಾಲಾ ತಂತ್ರಜ್ಞರು, 8 ಕ್ಷ-ಕಿರಣ ತಂತ್ರಜ್ಞರ ಹುದ್ದೆಗಳನ್ನು ಭರ್ತಿ ಮಾಡಲು ಸೆ.7ರಂದು ಈಗಾಗಲೇ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಹೇಳಿದರು.