ಕೊಡಗು ಜಿಲ್ಲೆಯಲ್ಲಿ ಭಾನುವಾರದಿಂದ ದಿನವಿಡೀ ಎಡಬಿಡದೆ ಭಾರೀ ಮಳೆ ಸುರಿಯುತ್ತಿರುವುದರಿಂದ ಕುಶಾಲನಗರದ ಹಾರಂಗಿ ಜಲಾಶಯದ ಒಳಹರಿವಿನ ಪ್ರಮಾಣ 10 ಸಾವಿರ ಕ್ಯೂಸೆಕ್ಗೆ ಏರಿಕೆಯಾಗಿದೆ. ಕ್ಷಣ ಕ್ಷಣಕ್ಕೂ ಒಳಹರಿವು ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವುದರಿಂದ ರಾತ್ರಿ 12 ಗಂಟೆ ಸುಮಾರಿಗೆ ಜಲಾಶಯದಿಂದ ಸುಮಾರು 10 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ.
ಇದರಿಂದ ಕಾವೇರಿ ಮತ್ತು ಹಾರಂಗಿ ನದಿ ದಂಡೆಯಲ್ಲಿ ಪ್ರವಾಹದ ಭೀತಿ ಸೃಷ್ಟಿಯಾಗಿದೆ.
ಮಡಿಕೇರಿ ತಾಲೂಕಿನ ಭಾಗಮಂಡಲದಲ್ಲೂ ರಾತ್ರಿಯಿಂದ ಉತ್ತಮ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮದಲ್ಲಿ ನದಿಯ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗುತ್ತಿದೆ. ಇದೇ ರೀತಿಯಲ್ಲಿ ಮಳೆ ಮುಂದುವರೆದರೆ ಮಡಿಕೇರಿ-ನಾಪೋಕ್ಲು ರಸ್ತೆ ಕಡಿತಗೊಳ್ಳುವ ಸಾಧ್ಯತೆಯೂ ಇದೆ. ಅಲ್ಲದೇ ಜಿಲ್ಲೆಯಲ್ಲಿ ವಿಪರೀತ ಗಾಳಿ ಮಳೆಯಾಗುತ್ತಿದ್ದು,
ಹಲವಾರು ಗ್ರಾಮೀಣ ಭಾಗದಲ್ಲಿ ವಿದ್ಯುತ್ ಕಂಬ ಹಾಗೂ ಮರಗಳು ಬಿದ್ದು ರಸ್ತೆ ಸಂಚಾರಕ್ಕೂ ಅಡಚಣೆಯಾಗಿದೆ. ಕೆಲ ಗ್ರಾಮ ವಿದ್ಯುತ್ ಇಲ್ಲದೆ ಕಗತ್ತಲೆಯಲ್ಲಿ ಮುಳುಗಿದೆ. ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಜಿಲ್ಲೆಯಾದ್ಯಂತ ಅಂಗನವಾಡಿ ಸೇರಿದಂತೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕೊಡಗು ಜಿಲ್ಲೆಗೆ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಆರೆಂಜ್ ಅಲರ್ಟ್ ಘೋಷಿಸಿದೆ.