ಲಕ್ನೋ: ಮಾಘ ಪೂರ್ಣಿಮೆಯ ಪ್ರಯುಕ್ತ ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಲು ಹೊರಟಿದ್ದ ಯಾತ್ರಿಕರನ್ನುಒಳಗೊಂಡ ಟ್ರ್ಯಾಕ್ಟರ್ ಟ್ರಾಲಿ ಕೊಳಕ್ಕೆ ಬಿದ್ದ ಪರಿಣಾಮ 7 ಮಂದಿ ಮಕ್ಕಳು ಸೇರಿದಂತೆ ಒಟ್ಟು 15 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ಘಟನೆ ಉತ್ತರಪ್ರದೇಶದ ಕಾಸ್ಗಂಜ್ನಲ್ಲಿ (Kasganj) ನಡೆದಿದೆ.
ಘಟನೆ ನಡೆದ ಕೂಡಲೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯ ಕುರಿತು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ. ಪರಿಹಾರ ಘೋಷಿಸಿದ್ದಾರೆ. ಇನ್ನು ಘಟನೆಯಲ್ಲಿ ಗಾಯಗೊಂಡ ಯಾತ್ರಾರ್ಥಿಗಳಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಬೇಕು ಎಂದು ಯೋಗಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.