ಮುಂಬೈ: ಇತ್ತೀಚಿನ ದಿನಗಳಲ್ಲಿ ವಿವಿಧ ಕಾರಣಗಳಿಂದಾಗಿ ಹೆಣ್ಣುಮಕ್ಕಳು 18 ವರ್ಷ ತುಂಬುವ ಮೊದಲೇ ಗರ್ಭ ಧರಿಸುವ ಪ್ರಕರಣಗಳು ಕಂಡುಬರುತ್ತಿವೆ. ಈ ನಡುವೆ ಮಹಾರಾಷ್ಟ್ರದಲ್ಲಿ ಬಿಡುಗಡೆಯಾಗಿರುವ ವರದಿ ನೋಡಿ ಜನ ಶಾಕ್ ಆಗಿದ್ದಾರೆ.
ಬುಡಕಟ್ಟು ಸಮುದಾಯದ ಜನರೇ ಹೆಚ್ಚಿರುವ ಮಹಾರಾಷ್ಟ್ರದ 16 ಜಿಲ್ಲೆಗಳಲ್ಲಿ ಕಳೆದ 3 ವರ್ಷಗಳಲ್ಲಿ 15,253 ಹದಿಹರೆಯದ ಹೆಣ್ಣುಮಕ್ಕಳು 18 ವರ್ಷ ಆಗುವ ಮೊದಲೇ ತಾಯಂದಿರಾಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಮಂಗಲ್ ಪ್ರಭಾತ್ ಲೋಧಾ ಹೇಳಿದ್ದಾರೆ.
ಮಹಾರಾಷ್ಟ್ರ ವಿಧಾನ ಪರಿಷತ್ತಿನಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿರುವ ಸಚಿವರು, 18 ವರ್ಷಕ್ಕಿಂತ ಕಡಿಮೆ ವಯಸ್ಸಿನ 15 ಸಾವಿರಕ್ಕೂ ಹೆಚ್ಚು ಹೆಣ್ಣುಮಕ್ಕಳು ಗರ್ಭಿಣಿಯರಾಗಿರುವುದು ಕಂಡುಬಂದಿದೆ. ಈ ಬಗ್ಗೆ ಮಾಹಿತಿ ಸಂಗ್ರಹಿಸಲು ಇಲಾಖೆಯು ಮೂರು ಸದಸ್ಯರನ್ನು ಒಳಗೊಂಡ ಸಮತಿ ರಚಿಸಿದ್ದು, ಸಮಿತಿ ನಡೆಸಿದ ತನಿಖೆಯಲ್ಲಿ 15 ಸಾವಿರಕ್ಕೂ ಹೆಚ್ಚು ಬಾಲ್ಯವಿವಾಹಗಳು ನಡೆದಿರುವುದು ಬೆಳಕಿಗೆ ಬಂದಿದೆ ಎಂದು ತಿಳಿಸಿದ್ದಾರೆ.