ಮುಂಬೈ: ಮಹಾರಾಷ್ಟ್ರದ (Maharashtra) ಥಾನೆಯಲ್ಲಿ (Thane) ಶನಿವಾರ 3 ಅಂತಸ್ತಿನ ಕಟ್ಟಡ ಕುಸಿದ (Building Collapse) ಪರಿಣಾಮ ಅವಶೇಷಗಳಡಿ ಸಿಲುಕಿ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ. ಸುಮಾರು 20 ಗಂಟೆಗಳ ಕಾಲ ನಡೆಸಿರುವ ತೆರವು ಕಾರ್ಯಾಚರಣೆಯಲ್ಲಿ 12 ಜನರನ್ನು ರಕ್ಷಿಸಲಾಗಿದೆ.
ಮಹಾರಾಷ್ಟ್ರದ ಥಾಣೆಯಲ್ಲಿರುವ ಭಿವಂಡಿಯಲ್ಲಿ 3 ಅಂತಸ್ತಿನ ಕಟ್ಟಡ ಕುಸಿದಿದೆ. ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಬಳಿಕ ಸ್ಥಳಕ್ಕೆ ಆಗಮಿಸಿದ ಎನ್ಡಿಆರ್ಎಫ್ ಹಾಗೂ ಟಿಡಿಆರ್ಎಫ್ ತಂಡಗಳು ರಕ್ಷಣಾ ಕಾರ್ಯಚರಣೆಯಲ್ಲಿ ತೊಡಗಿವೆ.
ಘಟನೆಯಲ್ಲಿ ಒಂದು ಮಗು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 12 ಜನರನ್ನು ರಕ್ಷಿಸಲಾಗಿದೆ. ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರಿಸಲಾಗಿದೆ. ಗಾಯಾಳುಗಳನ್ನು ಇಂದಿರಾಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳನ್ನು ವಿಚಾರಿಸಿದ್ದಾರೆ. ಘಟನೆಯಲ್ಲಿ ಬದುಕುಳಿದಿರುವ ಇಬ್ಬರು ಮಕ್ಕಳ ಬಗ್ಗೆಯೂ ವಿಚಾರಿಸಿದ್ದಾರೆ. ಸರ್ಕಾರಿ ವೆಚ್ಚದಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಸೂಚಿಸಲಾಗಿದೆ. ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ.