ಬೆಂಗಳೂರಿನಲ್ಲಿ 35 ಸಾವಿರ ಅನಧಿಕೃತ ಜಾಹೀರಾತು ಫಲಕ ತೆರವು ಮಾಡಲಾಗಿದೆ ಎಂದು ಬಿಬಿಎಂಪಿ ಬೆಂಗಳೂರಿನ ಹೈಕೋರ್ಟ್ಗೆ ಮಾಹಿತಿ ನೀಡಿದೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ಬಿಬಿಎಂಪಿ ಪರ ವಕೀಲರು, ಈ ಹಿಂದೆ ಹೈಕೋರ್ಟ್ ನೀಡಿದ್ದ ನಿರ್ದೇಶನದನ್ವಯ ಅನಧಿಕೃತ ಜಾಹೀರಾತು ತೆರವು ಮತ್ತು ಅವುಗಳನ್ನು ತಡೆಗಟ್ಟುವ ಸಂಬಂಧ ಕೈಗೊಂಡ ಕ್ರಮಗಳ ಕುರಿತಾದ ಅನುಪಾಲನಾ ವರದಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.
ನಗರದ ಎಂಟು ವಲಯಗಳಲ್ಲಿ 2023ರ ಮಾರ್ಚ್ ನಿಂದ ಮೇ 25ರವರೆಗೆ ಅಳವಡಿಸಲಾಗಿದ್ದ ಒಟ್ಟು 35,137 ಅನಧಿಕೃತ ಫ್ಲೆಕ್ಸ್, ಬ್ಯಾನರ್ ಮತ್ತು ಇತರೆ ಜಾಹೀರಾತುಗಳನ್ನು ಗುರುತಿಸಲಾಗಿದೆ. ಅವುಗಳ ಪೈಕಿ 34,541 ಫಲಕಗಳನ್ನು ತೆರವುಗೊಳಿಸಲಾಗಿದೆ. ಅನಧಿಕೃತ ಜಾಹೀರಾತು ಅಳವಡಿಕೆ ಸಂಬಂಧ ಒಟ್ಟು 37 ದೂರುಗಳು ಸಲ್ಲಿಕೆಯಾಗಿದ್ದವು. ಈ ಸಂಬಂಧ 40 ಎಫ್ಐಆರ್ಗಳನ್ನು ದಾಖಲಿಸಲಾಗಿದೆ’ ಎಂದು ಅನುಪಾಲನಾ ವರದಿಯಲ್ಲಿ ತಿಳಿಸಲಾಗಿದೆ.