ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ರದ್ದಿನ ವಿಚಾರ ಭಾರೀ ಸದ್ದು ಮಾಡುತ್ತಿದೆ. ವಿಪಕ್ಷ ನಾಯಕರು ಸಹ ಈ ಬಗ್ಗೆ ಸರ್ಕಾರವನ್ನು ಪ್ರಶ್ನೆ ಮಾಡಿದ್ದರು. ಇದೀಗ ಮತ್ತೆ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರ ರದ್ದು ಮಾಡಲಾಗುವುದು.
ಅರ್ಹರಿಗೆ ಕಾರ್ಡ್ ತಪ್ಪಿಸುವುದಿಲ್ಲ ಎಂದಿದ್ದಾರೆ. ಕನಕದಾಸ ಜಯಂತಿ ಪ್ರಯುಕ್ತ ಕನಕ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾತನಾಡಿದ ಅವರು, ಅರ್ಹರಿಗೆ ಕಾರ್ಡ್ ಗಳ ತಪ್ಪಿಸುವುದಿಲ್ಲ. ಅನ್ನಭಾಗ್ಯ ಯೋಜನೆಯನ್ನು ಜಾರಿ ಮಾಡಿದ್ದು ನಾವೇ ಹೊರತು, ಬಿಜೆಪಿಯಾಗಲಿ ಜೆಡಿಎಸ್ ಆಗಲಿ ನೀಡಿಲ್ಲ. ಕಾರ್ಯಕ್ರಮ ಜಾರಿ ಮಾಡಿದ್ದು ಈ ಸಿದ್ದರಾಮಯ್ಯ. 2017ರಲ್ಲಿ ಒಂದು ರೂಪಾಯಿಗೆ ನೀಡುತ್ತಿದ್ದ ಅಕ್ಕಿಯನ್ನು ಉಚಿತವಾಗಿ ನೀಡಲಾಯಿತು. ಇದನ್ನು ಬಿಜೆಪಿ ಮಾಡಿಲ್ಲ. ಸುಮ್ಮನೆ ಮಾತನಾಡುತ್ತಾರೆ. ಬಿಜೆಪಿ ಅಧಿಕಾರದಲ್ಲಿರುವ ಯಾವ ರಾಜ್ಯದಲ್ಲಿ ಇಂಥ ಯೋಜನೆಯನ್ನು ಜಾರಿ ಮಾಡಿದ್ದಾರೆ. ಗುಜರಾತ್, ಮಧ್ಯಪ್ರದೇಶ, ಬಿಹಾರ, ಉತ್ತರ ಪ್ರದೇಶ, ಹರಿಯಾಣ ಎಲ್ಲಿ ಮಾಡಿದ್ದಾರೆ ಹೇಳಿ ಎಂದು ಪ್ರಶ್ನಿಸಿದರು.
ಗ್ಯಾರಂಟಿಗಳ ಬಗ್ಗೆ ನೈತಿಕತೆ ಇಲ್ಲ
ಇನ್ನೂ ಇದೇ ವೇಳೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರ ಕೇವಲ ಗ್ಯಾರಂಟಿ ಎನ್ನುತ್ತಿದೆ. ತೆರಿಗೆ ಹಣ ಎಲ್ಲಿ ಹೋಗುತ್ತಿದೆ ಎಂದು ಜನರಿಗೆ ಉತ್ತರ ನೀಡಬೇಕು ಎಂದು ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ ಕುಮಾರಸ್ವಾಮಿ ಇರುವಾಗ ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದರೆ..? ಅವರಿಗೆ ಮಾತನಾಡಲು ಯಾವ ನೈತಿಕ ಹಕ್ಕಿದೆ ಎಂದು ಪ್ರಶ್ನಿಸಿದರು.
ರಾಜ್ಯಕ್ಕೆ ತೆರಿಗೆ ಹಣ ಕೊಡಿಸಲಿ
ನಾವು ಕರ್ನಾಟಕ ರಾಜ್ಯದಿಂದ ಕೇಂದ್ರಕ್ಕೆ 4.50 ಲಕ್ಷ ಕೋಟಿ ತೆರಿಗೆಯನ್ನು ಕಟ್ಟುತ್ತೇವೆ. ನಮಗೆ ವಾಪಸ್ಸು ಬರುವುದು 59 ಸಾವಿರ ಕೋಟಿ ಮಾತ್ರ. ಉಳಿದ ದುಡ್ಡು ಕೇಂದ್ರದಲ್ಲಿಯೇ ಇರುತ್ತದೆ. ಅದನ್ನು ರಾಜ್ಯಕ್ಕೆ ಕೊಡಿಸಲಿ ಎಂದರು. ಬರೀ ಮಾತನಾಡಿದರೆ ಪ್ರಯೋಜನವೇನು? ಹೆಚ್.ಡಿ.ದೇವೇಗೌಡರಾಗಲಿ, ಕುಮಾರಸ್ವಾಮಿಯವರಾಗಲಿ ಕರ್ನಾಟಕಕ್ಕೆ ಅನ್ಯಾಯವಾದಾಗ ಮಾತನಾಡಿದ್ದರೆಯೇ ಎಂದು ಪ್ರಶ್ನಿಸಿದರು.
ಹೆಚ್ ಡಿಕೆ, ಜೋಶಿ ಏನು ಮಾಡುತ್ತಿದ್ದಾರೆ..?
ನಬಾರ್ಡ್ ವತಿಯಿಂದ ಕಳೆದ ವರ್ಷ 5600 ಕೋಟಿ ಸಾಲ ರಾಜ್ಯಕ್ಕೆ ನೀಡಲಾಗಿತ್ತು. ಈ ವರ್ಷ 2340 ಕೋಟಿ ನೀಡಿದ್ದಾರೆ ಇದು ಅನ್ಯಾಯವಲ್ಲವೇ..? ಸಾಲದ ಪ್ರಮಾಣವನ್ನು 58% ರಷ್ಟು ಕಡಿಮೆ ಮಾಡಿದ್ದಾರೆ. ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿಯವರು ಕರ್ನಾಟಕದ ಮಂತ್ರಿಗಳಾಗಿ ಏನು ಮಾಡುತ್ತಿದ್ದಾರೆ ಎಂದರು. ರೈತರಿಗೆ ಅನ್ಯಾಯ ಮಾಡಬೇಡಿ ಇದು ದ್ರೋಹದ ಕೆಲಸ ಎಂದು ಪ್ರಧಾನ ಮಂತ್ರಿಗಳಿಗೆ, ಹಣಕಾಸು ಸಚಿವ ನಿರ್ಮಾಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದೇನೆ ಎಂದರು.
ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕಾನೂನು ಹೋರಾಟ
ಮಹಾರಾಷ್ಟ್ರ ಜನರನ್ನು ದಾರಿತಪ್ಪಿಸಿ, ಮತಗಳಿಸಲು ಮಹಾರಾಷ್ಟ್ರ ಸರ್ಕಾರ ನೀಡಿರುವ ಸುಳ್ಳು ಜಾಹೀರಾತು ಇದು ಎಂದರು. ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕಾನೂನು ಹೋರಾಟ ನಡೆಸಲು ಪರಿಶೀಲನೆ ಮಾಡಲಾಗುತ್ತಿದೆ ಎಂದರು.