ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ವಿಶ್ವಾಸ ಇದೆ ಎಂದು ಕಾಂಗ್ರೆಸ್ ಮುಖಂಡ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಈ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ತಪ್ಪುಗಳೇ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ವರದಾನವಾಗಲಿವೆ. ಬಿಜೆಪಿ ವಿರುದ್ಧ ಆಡಳಿತ ವಿರೋಧಿ ಅಲೆ ಜತೆಗೆ ಅಡುಗೆ ಅನಿಲ ಸೇರಿ ದಿನಬಳಕೆ ವಸ್ತುಗಳ ಬೆಲೆ ಏರಿಕೆಯ ಆಕ್ರೋಶವಿದೆ. ಇವೆಲ್ಲದರ ನಡುವೆ ಕಾಂಗ್ರೆಸ್ ನೀಡಿರುವ 4 ಗ್ಯಾರಂಟಿ ಯೋಜನೆಗಳು ಜನರಲ್ಲಿ ವಿಶ್ವಾಸ ಮೂಡಿಸಿರುವುದರಿಂದ ನಮ್ಮ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ ಎಂದರು.
ನಗರ ಮತ್ತು ಗ್ರಾಮೀಣ ಭಾಗದ ತಟಸ್ಥ ಮತದಾರರು ಈ ಚುನಾವಣೆಯಲ್ಲಿ ನಮ್ಮ ಪರ ಒಲವು ತೋರಲಿದ್ದಾರೆ. ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್ ಬಗ್ಗೆ ಬಡವರು, ಕೆಳವರ್ಗದ ಜನರಲ್ಲಿ ವಿಶ್ವಾಸ ಮೂಡಿದೆ. ನಾವು ಅಧಿಕಾರಕ್ಕೆ ಬಂದಾಗ ಕೊಟ್ಟ ಭರವಸೆ ಈಡೇರಿಸಿದ್ದೆವು. ಕಾಂಗ್ರೆಸ್ ಬಂದರೆ ಕೊಟ್ಟ ಮಾತು ಉಳಿಸಿಕೊಳ್ಳುತ್ತಾರೆ ಎಂಬ ನಂಬಿಕೆಯಿದೆ. ಇವೆಲ್ಲ ಅಂಶಗಳು ನಾವು ಅಧಿಕಾರಕ್ಕೆ ಬರಲು ಸಹಕಾರಿಯಾಗಲಿವೆ ಎಂದು ಸಮರ್ಥಿಸಿಕೊಂಡರು.