ಹುಬ್ಬಳ್ಳಿ: ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಧಾರವಾಡ ಗ್ರಾಮೀಣ ಕ್ಷೇತ್ರದ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಕಾರ್ಯಕರ್ತರಲ್ಲಿ ಉತ್ಸಾಹ ಇಮ್ಮಡಿಯಾಗಿದೆ.
ವಿನಯ್ ಕುಲಕರ್ಣಿ 2013ರಲ್ಲಿ ಇದೇ ಕ್ಷೇತ್ರವನ್ನು ಪ್ರತಿನಿಧಿಸಿ ಶಾಸಕರಾಗಿ, ಸಿದ್ದರಾಮಯ್ಯನವರ ಸರ್ಕಾರದಲ್ಲಿ ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವರಾಗಿಯೂ ಸಾಕಷ್ಟು ಅಭಿವೃದ್ಧಿ ಕೆಲಸಗಳಿಗೆ ಮುನ್ನುಡಿ ಬರೆದಿದ್ದಲ್ಲದೇ ಗ್ರಾಮೀಣ ಕ್ಷೇತ್ರವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ದಿದ್ದರು.
ಅದಕ್ಕೂ ಮುನ್ನ ಅವರು ಪಕ್ಷೇತರರಾಗಿ ಶಾಸಕರಾಗಿ ಆಯ್ಕೆಯಾಗಿದ್ದ ವಿನಯ್ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದರು. ಇದೀಗ 2023ರ ವಿಧಾನಸಭಾ ಚುನಾವಣೆಗೆ ಧಾರವಾಡ ಗ್ರಾಮೀಣ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಲು ವಿನಯ್ಗೆ ಗ್ರೀನ್ ಸಿಗ್ನಲ್ ಸಿಕ್ಕಿರುವುದರಿಂದ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂತಸ ಇಮ್ಮಡಿಗೊಂಡಿದೆ.
ಸದ್ಯ ವಿನಯ್ ಅವರಿಗೆ ಧಾರವಾಡ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದ್ದು, ಚುನಾವಣೆ ಸಂದರ್ಭದಲ್ಲಿ ಅವರಿಗೆ ಜಿಲ್ಲಾ ಪ್ರವೇಶಕ್ಕೆ ಅವಕಾಶ ಸಿಕ್ಕೇ ಸಿಗುತ್ತದೆ ಎಂಬ ಭರವಸೆಯಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಿದ್ದು, ಒಂದು ವೇಳೆ ವಿನಯ್ ಬರದೇ ಹೋದರೂ ಅವರನ್ನು ಗೆಲ್ಲಿಸಿ ತರುವ ಜವಾಬ್ದಾರಿಯನ್ನು ಕಾಂಗ್ರೆಸ್ ಕಾರ್ಯಕರ್ತರು ಹೊತ್ತುಕೊಂಡಿದ್ದಾರೆ.
ವರದಿ: ಕಲ್ಮೇಶ ಮಂಡ್ಯಾಳ, ಹುಬ್ಬಳ್ಳಿ