ಬೆಂಗಳೂರು: ಅಮುಲ್ ನಲ್ಲಿ (Amul), ಕೆಎಂಎಫ್ (KMF) ಹಾಲು ಒಕ್ಕೂಟ ವಿಲೀನ ಚರ್ಚೆ ಮತ್ತೆ ಮುನ್ನಲೆಗೆ ಬಂದಿದೆ. ರಾಜ್ಯ ಬಿಜೆಪಿ ಸರ್ಕಾರ ಈ ವಿಚಾರವಾಗಿ ಸ್ಪಷ್ಟನೆ ನೀಡಿದ್ದರೂ, ಪ್ರತಿಪಕ್ಷಗಳು ಚುನಾವಣೆ ಹೊತ್ತಿಲಿನಲ್ಲಿ ಪ್ರತಿರೋಧದ ದಾಳವಾಗಿ ಬಳಸಿಕೊಳ್ಳುತ್ತವೆ. ಹೌದು ಈ ವಿಚಾರವಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramiah) ಟ್ವೀಟ್ ಮಾಡಿ ರಾಜ್ಯ ಸರ್ಕಾರ (Karnataka Government), ಪ್ರಧಾನಿ ನರೇಂದ್ರ ಮೋದಿ (PM Narendra Modi) ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ (Amith Shah) ಅವರ ವಿರುದ್ಧ ಹರಿಹಾಯ್ದಿದ್ದಾರೆ. “ಕರ್ನಾಟಕದಲ್ಲಿ ನಮ್ಮ ಹಿರಿಯರು ಕಟ್ಟಿ ಬೆಳೆಸಿದ್ದ ಬ್ಯಾಂಕುಗಳನ್ನು ತಿಂದು ಮುಕ್ಕಿದ್ದಾಯಿತು. ಈಗ ರೈತರ ಪಾಲಿನ ಸಂಜೀವಿನಿಯಾಗಿರುವ ನಂದಿನಿಯನ್ನು ಆಪೋಶನ ತೆಗೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಚು ಹೂಡಿದ್ದಾರೆ. ಕನ್ನಡಿಗರೇ ಎಚ್ಚರ…!!” ಎಂದು ಟ್ವೀಟ್ ಮಾಡಿದ್ದಾರೆ.
“ಕೆಎಂಎಫ್ ಮತ್ತು ಅಮುಲ್ ಸಂಸ್ಥೆಗಳ ವಿಲೀನದ ಬಗ್ಗೆ ಕೇಂದ್ರ ಸಹಕಾರ ಸಚಿವರೂ ಆಗಿರುವ ಅಮಿತ್ ಶಾ ಪ್ರಸ್ತಾಪ ಮಾಡಿದ ದಿನದಿಂದ ರಾಜ್ಯದ ಹೈನು ಉದ್ಯಮಕ್ಕೆ ಗರ ಬಡಿದಿದೆ. ವಿಲೀನದ ಪ್ರಸ್ತಾವಕ್ಕೆ ಕನ್ನಡಿಗರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಹಿಂಬಾಗಿಲಿನಿಂದ ಅಮುಲ್ ಪ್ರವೇಶಿಸುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ನಂದಿನಿ ಹಾಲು ಮತ್ತು ಮೊಸರು ಮಾರುಕಟ್ಟೆಯಲ್ಲಿ ಮಾಯವಾಗುತ್ತಿದೆ. ಇದೇ ವೇಳೆ ಅಮುಲ್ ಉತ್ಪನ್ನಗಳ ಮಾರಾಟ ಭರದಿಂದ ಪ್ರಾರಂಭವಾಗಿದೆ. ಸಚಿವ ಅಮಿತ್ ಶಾ ನೇರ ಉಸ್ತುವಾರಿಯಲ್ಲಿಯೇ ಇವೆಲ್ಲ ನಡೆಯುತ್ತಿದೆ ಎನ್ನುವುದು ನಿಸ್ಸಂಶಯ ಎಂದರು.”