ಮಂಡ್ಯ : ರಾಜ್ಯ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಯು ಗುರುವಾರದಿಂದ ಆರಂಭವಾಗಿದ್ದು, ಮದ್ದೂರು ವಿಧಾನ ಸಭಾ ಕ್ಷೇತ್ರದಲ್ಲಿ ಮೊದಲ ದಿನ ಇಬ್ಬರು ಉಮೇದುವಾರಿಕೆ ಸಲ್ಲಿಸಿದ್ದಾರೆ.
ಮದ್ದೂರು ತಾಲ್ಲೂಕಿನ ಗುಡಿಗೆರೆ ಗ್ರಾಮ ಪಂಚಾಯಿತಿ ಸದಸ್ಯ ಜಿ.ಬಿ. ಮಂಜುನಾಥ್ ಪತ್ನಿ ರಶ್ಮಿ ಹಾಗೂ ಬೆಂಬಲಿಗರೊಂದಿಗೆ ಆಗಮಿಸಿ ತಾಲ್ಲೂಕು ಕಛೇರಿಯಲ್ಲಿದ್ದ ಚುನಾವಣಾಧಿಕಾರಿ ಆರ್.ನಾಗರಾಜ್ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ನಾನು ಗ್ರಾಮ ಪಂಚಾಯಿತಿ ಸದಸ್ಯನಾಗಿ ಜನಪರ ಕೆಲಸಗಳನ್ನು ಮಾಡಿಕೊಂಡು ಬರುತ್ತಿದ್ದೇನೆ. ಇದರ ಜೊತೆಗೆ ಮದ್ದೂರು ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲು ಈ ಚುನಾವಣೆಯಲ್ಲಿ ಸ್ಪರ್ಧಿಸುವ ನಿರ್ಧಾರ ಮಾಡಿದ್ದೇನೆ.
ಕ್ಷೇತ್ರದಲ್ಲಿ ಇಲ್ಲಿಯವರೆಗೂ ಆಡಳಿತ ನಡೆಸಿರುವ ಜನಪ್ರತಿನಿಧಿಗಳು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಮೀತಿ ಮೀರಿದ ಲಂಚಗುಳಿತನವನ್ನು ನಿಯಂತ್ರಿಸುವಲ್ಲಿ ವಿಫಲರಾಗಿದ್ದಾರೆ. ಹಾಗೂ ರೈತರ ಬಹು ಬೇಡಿಕೆಯಾದ ಕಬ್ಬು ಮತ್ತು ಹಾಲಿಗೆ ಬೆಂಬಲ ಬೆಲೆ ನಿಗದಿ ಸೇರಿದಂತೆ ಎಲ್ಲಾ ನ್ಯೂನತೆಗಳನ್ನು ಸರಿಪಡಿಸುವ ಒಂದೇ ಗುರಿಯನ್ನು ಹೊಂದಿದ್ದೇನೆ. ನವ ಮದ್ದೂರು ಕಟ್ಟುವ ನನ್ನ ಸಂಕಲ್ಪಕ್ಕೆ ಕ್ಷೇತ್ರದ ಜನರು ಕೈ ಜೋಡಿಸುತ್ತಾರೆ. ಹಾಗೂ ನನ್ನನ್ನು ಆಶೀರ್ವದಿಸುತ್ತಾರೆ ಎಂಬ ಅಚಲ ನನ್ನದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಆನಂತರ ಮದ್ದೂರು ಪಟ್ಟಣದ ಚನ್ನೇಗೌಡ ಬಡಾವಣೆಯ ಸುಧಾಮೂರ್ತಿ ಅಮ್ಮ ಸೇವಾ ಬಳಗದ ಸದಸ್ಯ ಸಿ.ಪ್ರಕಾಶ್ ನಾಮಪತ್ರ ಸಲ್ಲಿಸಿದರು.
ಉಮೇದುವಾರಿಕೆ ಮುನ್ನ ಪುರಸಭೆ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ತಳಿಗೆ ಮಾಲಾರ್ಪಣೆ ಮಾಡಿದ ಬಳಿಕ ನೂರಾರು ಬೆಂಬಲಿಗರೊಂದಿಗೆ ಆಗಮಿಸಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ತಮ್ಮ ಸ್ಪರ್ಧೆ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಹಲವು ವರ್ಷಗಳಿಂದ ಕ್ಷೇತ್ರದಲ್ಲಿ ಸಮಾಜ ಸೇವೆ, ಪರಿಸರ ಸಂರಕ್ಷಣೆ ಹಾಗೂ ಕೋವಿಡ್ ಸಂದರ್ಭದಲ್ಲಿ ನಿರಂತರವಾಗಿ ಸಮಾಜ ಮುಖಿ ಸೇವೆಯನ್ನು ನಡೆಸಿಕೊಂಡು ಬಂದಿದ್ದೇನೆ.
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸಿದರೇ, ಸರ್ಕಾರದ ಮಟ್ಟದಲ್ಲಿ ಭ್ರಷ್ಟಾಚಾರ ಕಡಿವಾಣಕ್ಕೆ ಕಠಿಣ ಕ್ರಮ ಕೈಗೊಳ್ಳುವುದು, ಗುತ್ತಿಗೆ ಕಾರ್ಮಿಕರನ್ನು ಕಾಯಂಗೊಳಿಸುವುದು, ಕೋಮುವಾದ ತಡೆಗಟ್ಟುವುದು, ಜನರ ನಡುವೆ ಸಾಮರಸ್ಯ ಬೆಳೆಸುವುದಕ್ಕೆ ಹೆಚ್ಚಿನ ಆದ್ಯತೆ ಹಾಗೂ ಮಾದರಿ ಕ್ಷೇತ್ರವನ್ನಾಗಿ ಮಾಡುವುದಾಗಿ ವಾಗ್ದಾನ ನೀಡಿದರು.
ವರದಿ : ಗಿರೀಶ್ ರಾಜ್ ಮಂಡ್ಯ.