ಕೋಲಾರ: ಕೋಲಾರ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಮೂರನೇ ದಿನವಾದ ಸೋಮವಾರ ಒಟ್ಟು 21 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದು, ಜಿಲ್ಲೆಯಲ್ಲಿ ಈವರೆಗೆ ಒಟ್ಟು 36 ನಾಮಪತ್ರಗಳು ಸಲ್ಲಿಕೆಯಾಗಿವೆ.
ಮುಳಬಾಗಿಲು ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಮಂಜುನಾಥ್ ಹಾಗೂ ಬಿಜೆಪಿ ಅಭ್ಯರ್ಥಿಯಾಗಿ ಶೀಗೇಹಳ್ಳಿ ಸುಂದರ್ರವರು ನಾಮಪತ್ರ ಸಲ್ಲಿಸಿದ್ದಾರೆ. ಶ್ರೀನಿವಾಸಪುರ ವಿಧಾನಸಭಾ ಮತಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದಿಂದ ಡಾ.ವೈ.ವಿ ವೆಂಕಟಾಚಲ ಅವರು ನಾಮಪತ್ರ ಸಲ್ಲಿಸಿದ್ದಾರೆ. ಕೋಲಾರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ವರ್ತೂರು ಪ್ರಕಾಶ್ ಹಾಗೂ ಜೆಡಿಎಸ್ ಅಭ್ಯರ್ಥಿ ಸಿಎಂಆರ್ ಶ್ರೀನಾಥ್ ಅವರು ಮತ್ತೊಮ್ಮೆ ನಾಮಪತ್ರ ಸಲ್ಲಿಸಿದ್ದಾರೆ. ಬಂಗಾರಪೇಟೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಸ್ಎನ್ ನಾರಾಯಣಸ್ವಾಮಿ, ಜೆಡಿಎಸ್ ಅಭ್ಯರ್ಥಿಯಾಗಿ ಎಂ. ಮಲ್ಲೇಶಬಾಬು ಹಾಗೂ ಬಿಜೆಪಿ ಅಭ್ಯರ್ಥಿಯಾಗಿ ಎಂ.ನಾರಾಯಣಸ್ವಾಮಿ ರವರು ನಾಮಪತ್ರ ಸಲ್ಲಿಸಿದ್ದಾರೆ.
ಇನ್ನು ಮಾಲೂರು ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಜೆಡಿಎಸ್ ಅಭ್ಯರ್ಥಿಯಾಗಿ ಜಿಈ ರಾಮೇಗೌಡ, ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆವೈ ನಂಜೇಗೌಡ, ಬಿಜೆಪಿ ಅಭ್ಯರ್ಥಿಯಾಗಿ ಕೆ ಎಸ್ ಮಂಜುನಾಥಗೌಡ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ನಾರಾಯಣಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಕೆಜಿಎಫ್ ವಿಧಾನಸಭಾ ಕ್ಷೇತ್ರದಿಂದ ಸಿಪಿಐ(ಎಂ) ಅಭ್ಯರ್ಥಿಯಾಗಿ ತಂಗರಾಜ್.ಪಿ, ಕಾಂಗ್ರೆಸ್ ಅಭ್ಯರ್ಥಿಯಾಗಿ ರೂಪಕಲಾ ಎಂ ಹಾಗೂ ಸಿಪಿಐ ಅಭ್ಯರ್ಥಿಯಾಗಿ ಜೋತಿಬಾಷ್, ಬಿಜೆಪಿ ಅಭ್ಯರ್ಥಿಯಾಗಿ ಅಶ್ವಿನಿ ಎಸ್ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ವೆಂಕಟೇಶಲು ಎಂ ನಾಮಪತ್ರ ಸಲ್ಲಿಸಿದ್ದಾರೆ.
ಒಟ್ಟಾರೆ ಜಿಲ್ಲೆಯಲ್ಲಿ ಬಂಗಾರಪೇಟೆಯಲ್ಲಿ 10, ಶ್ರೀನಿವಾಸಪುರದಲ್ಲಿ 4, ಮಾಲೂರಿನಲ್ಲಿ 10, ಮುಳಬಾಗಿಲಿನಲ್ಲಿ 1, ಕೆಜಿಎಫ್ ನಲ್ಲಿ 6 ಹಾಗೂ ಕೋಲಾರದಲ್ಲಿ 5 ಉಮೇದುವಾರಿಕೆಗಳು ಸಲ್ಲಿಕೆಯಾಗಿವೆ. ನಾಮಪತ್ರ ಸಲ್ಲಿಸಲು ಏಪ್ರಿಲ್ 20 ಕೊನೆ ದಿನವಾಗಿದೆ. ಏಪ್ರಿಲ್ 21 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 24 ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನಾಂಕವಾಗಿದೆ. ಮೇ 10 ರಂದು ಮತದಾನ ನಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ.