ಬೆಂಗಳೂರು: ಬಿಜೆಪಿ ಯಿಂದ ಅಸಮಾಧಾನಗೊಂಡು ಒಬ್ಬೊಬ್ಬರಾಗಿ ಲಿಂಗಾಯತ ನಾಯಕರು ಪಕ್ಷ ತೊರೆಯುತ್ತಿದ್ದು, ಡ್ಯಾಮೇಜ್ ಕಂಟ್ರೋಲ್ ಗೆ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಇಂದು ಮಹತ್ವದ ಸಭೆ ನಡೆಯಲಿದೆ. ಚುನಾವಣೆಯಲ್ಲಿ ತಮಗೆ ಟಿಕೆಟ್ ಸಿಗಲಿಲ್ಲವೆಂಬ ಕಾರಣಕ್ಕೆ ಸಿಡಿದೆದ್ದಿದ್ದ ಲಕ್ಷ್ಮಣ ಸವದಿ, ಜಗದೀಶ್ ಶೆಟ್ಟರ್ ಮೊದಲಾದವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಈ ನಡುವೆ ಬಿಜೆಪಿ ವಿಧಾನಪರಿಷತ್ ಸದಸ್ಯರಾದ ಮತ್ತೊಬ್ಬ ಲಿಂಗಾಯಿತ ನಾಯಕ ಆಯನೂರು ಮಂಜುನಾಥ್ ಇಂದು ಪಕ್ಷ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದಾರೆ.
ಜೊತೆಗೆ ತಮ್ಮ ವಿಧಾನಪರಿಷತ್ ಸದಸ್ಯತ್ವಕ್ಕೂ ರಾಜೀನಾಮೆ ನೀಡುತ್ತಿದ್ದಾರೆ. ಈ ಎಲ್ಲ ವಿದ್ಯಮಾನಗಳು ಬಿಜೆಪಿ ಹಿರಿಯ ನಾಯಕರನ್ನು ಕಂಗೆಡಿಸಿದ್ದು, ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿದ್ದಾರೆ ಎಂದು ಹೇಳಲಾಗಿದೆ. ಲಿಂಗಾಯತ ಸಮುದಾಯ ಈ ಮೊದಲಿನಿಂದಲೂ ಬಿಜೆಪಿ ಜೊತೆಗೆ ನಿಂತಿದ್ದು, ಇದು ಚದುರಿ ಹೋಗದಂತೆ ನೋಡಿಕೊಳ್ಳುವ ಸಲುವಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದಲ್ಲಿ ಇಂದು ಬಿಜೆಪಿ ಲಿಂಗಾಯತ ನಾಯಕರ ಸಭೆ ನಡೆಯಲಿದೆ ಎಂದು ತಿಳಿದು ಬಂದಿದೆ. ಈ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.