ಖಾರ್ಟೌಮ್: ಕಳೆದ ನಾಲ್ಕು ದಿನಗಳಿಂದ ಸುಡಾನ್ ನಲ್ಲಿ ಸೇನಾ ಪಡೆ ಹಾಗೂ ಅರೆ ಸೇನಾ ಪಡೆಗಳ ನಡುವೆ ನಡೆಯುತ್ತಿರುವ ಯುದ್ಧದಲ್ಲಿ ಕರ್ನಾಟಕದ ಹಕ್ಕಿಪಿಕ್ಕಿ ಜನಾಂಗದವರು ಅನ್ನ ಆಹಾರವಿಲ್ಲದೆ ಸಿಲುಕಿಕೊಂಡಿದ್ದಾರೆ. ಅವರನ್ನು ಮರಳಿ ತರಲು ಸರ್ಕಾರವಿನ್ನೂ ಕ್ರಮ ಕೈಗೊಂಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಈ ಟ್ವೀಟ್ಗೆ ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಸಚಿವ ಎಸ್ ಜೈಶಂಕರ್, ‘ಇಂತಹ ವಿಷಯಗಳಲ್ಲಿ ರಾಜಕೀಯ ಮಾಡಬೇಡಿ‘ ಎಂದು ತಿರುಗೇಟು ನೀಡಿದ್ದಾರೆ.
ಆಡಳಿತ ಚುಕ್ಕಾಣಿ ಹಿಡಿಯುವ ಸಲುವಾಗಿ ಸುಡಾನ್ನಲ್ಲಿ ಸೇನಾಪಡೆ ಮತ್ತು ಅರೆಸೇನಾ ಪಡೆಗಳ ನಡುವೆ ಕಳೆದ ಐದಾರು ದಿನಗಳಿಂದ ಯುದ್ದ ನಡೆಯುತ್ತಿದೆ. ಯುದ್ಧ ಪೀಡಿತ ಸುಡಾನ್ನಲ್ಲಿ ಕರ್ನಾಟಕದ ಹಕ್ಕಿಪಿಕ್ಕಿ ಸಮುದಾಯಕ್ಕೆ ಸೇರಿದ 31 ಜನರು ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಮೇಲೆ ಅಸಮಾಧಾನ ಹೊರಹಾಕಿದ್ದಾರೆ.