ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ರದ್ದು ಕೋರಿದ್ದ ಅರ್ಜಿ ವಿಚಾರಣೆಯನ್ನು ಮೇ ಅಂತ್ಯಕ್ಕೆ ಬೆಂಗಳೂರಿನ ಹೈಕೋರ್ಟ್ ಮುಂದೂಡಿದೆ. ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಸರ್ಕಾರ ಸಿಬಿಐ ತನಿಖೆಗೆ ಆದೇಶಿಸಿತ್ತು, ಇದನ್ನು ಪ್ರಶ್ನಿಸಿ ಕೆಪಿಸಿಸಿ ಅಧ್ಯಕ್ಷರು ಹೈಕೋರ್ಟ್ ಮೆಟ್ಟಿಲೇರಿದ್ದರು. ತನ್ನ ವಿರುದ್ಧದ ಸಿಬಿಐ ತನಿಖೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು.
ಅದರಂತೆ ವಿಚಾರಣೆ ಕೈಗೆತ್ತಿಕೊಂಡಿದ್ದ ಹೈಕೋರ್ಟ್, ಅರ್ಜಿದಾರರ ಪರ ಹಾಗೂ ಸಿಬಿಐ ಪರ ವಕೀಲರ ವಾದ ಪ್ರತಿವಾದ ಆಲಿಸುತ್ತಾ ಹಲವು ಬಾರಿ ತಡೆಯಾಜ್ಞೆಯನ್ನು ವಿಸ್ತರಿಸಿತ್ತು. ಸಿಬಿಐ ತನಿಖೆಗೆ ಅನುಮತಿ ನೀಡಿದ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಡಿಕೆ ಶಿವಕುಮಾರ್ ಅವರಿಗೆ ಆರಂಭದಲ್ಲಿ ಬಿಗ್ ರಿಲೀಫ್ ಸಿಕ್ಕಿತ್ತು. ಫೆ.24ರವರೆಗೂ ಸಿಬಿಐ ತನಿಖೆಗೆ ಮಧ್ಯಂತರ ತಡೆ ನೀಡಿ ಹೈಕೋರ್ಟ್ ಆದೇಶ ಹೊರಡಿಸಿತ್ತು. ಬಳಿಕ ನಡೆದ ವಿಚಾರಣೆಗಳ ಸಮಯದಲ್ಲಿ ಕೋರ್ಟ್, ಮಾರ್ಚ್ 31ಕ್ಕೆ, ಏಪ್ರಿಲ್ 6ಕ್ಕೆ, ಏಪ್ರಿಲ್ 13ಕ್ಕೆ, ಏಪ್ರಿಲ್ 17ರ ವರೆಗೆ ಮಧ್ಯಂತರ ತಡೆ ವಿಸ್ತರಿಸಿತ್ತು. ಇದೀಗ ಮತ್ತೆ ವಿಸ್ತರಣೆಗೊಂಡಿದೆ, ಆದರೆ ವಿಚಾರಣೆ ಅಂತ್ಯಗೊಂಡಿದ್ದು, ತೀರ್ಪು ಕಾಯ್ದಿರಿಸಲಾಗಿದೆ.