ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿರುವ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಎಐಸಿಸಿ ವರಿಷ್ಠೆ ಸೋನಿಯಾ ಗಾಂಧಿ(Sonia Gandhi) ಅವರು ಮೇ 6ರಂದು ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಲಿದ್ದು, ಹುಬ್ಬಳ್ಳಿಯಲ್ಲಿ ಅಂದು ನಡೆಯುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಲಿದ್ದಾರೆ. ಈಗಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಹೈಕಮಾಂಡ್ನ ಹಲವು ನಾಯಕರು ರಾಜ್ಯದ ವಿವಿಧ ಭಾಗಗಳಲ್ಲಿ ರಾಜ್ಯ ನಾಯಕರುಗಳೊಂದಿಗೆ ಭಾಗವಹಿಸಿ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ.
ಇದರ ಜತೆಗೆ ಪಕ್ಷದ ಸ್ಟಾರ್ ಪ್ರಚಾರಕರಲ್ಲಿ ಪ್ರಮುಖರಾದ ಸೋನಿಯಾ ಗಾಂಧಿ ಅವರು ಇದೇ ಮೊದಲ ಬಾರಿಗೆ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ. ಶನಿವಾರ ಬೆಳಗ್ಗೆ ದೆಹಲಿಯಿಂದ ರಾಜ್ಯಕ್ಕೆ ಆಗಮಿಸಲಿರುವ ಅವರು ಹುಬ್ಬಳ್ಳಿಯಲ್ಲಿ ಪಕ್ಷ ಆಯೋಜಿಸಿರುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಲಿದ್ದಾರೆ. ಬಳಿಕ ಸಂಜೆ ದೆಹಲಿಗೆ ವಾಪಸ್ಸಾಗುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಾಗಿತ್ತು.