ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿ (Karnataka CM) ಹಾಗೂ ಸಂಪುಟ ಗುರುವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಸಮಾರಂಭ ದಲ್ಲಿ ಭಾಗವಹಿಸಲಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಎಲ್ಲಾ ಸಮಾನ ಮನಸ್ಕ ಪಕ್ಷಗಳಿಗೆ ಕಾಂಗ್ರೆಸ್ ಆಹ್ವಾನ ಕಳುಹಿಸಿದೆ. ಕರ್ನಾಟಕ ಸಚಿವ ಸಂಪುಟದ ಅಂತಿಮ ರೂಪುರೇಷೆ ಒಂದೆರೆಡು ದಿನದಲ್ಲಿ ರೂಪುಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಬಹುಮತದ ಜಯ ಸಾಧಿಸಿದ ಬಳಿಕ, ಸಿದ್ದರಾಮಯ್ಯ (Siddaramaiah) ಹಾಗೂ ಡಿ.ಕೆ.ಶಿವಕುಮಾರ್ (DK Shivakumar) ಸಿಎಂಗಾದಿ ರೇಸ್ನಲ್ಲಿದ್ದಾರೆ. ಇಂದು ಸಿಎಲ್ಪಿ ಸಭೆ ನಡೆಯಲಿದೆ. ಸಭೆ ಕುರಿತು ದೆಹಲಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ವರದಿಯನ್ನು ಹೈಕಮಾಂಡ್ಗೆ ಹಸ್ತಾಂತರಿಸಲಿದ್ದು, ನಂತರ ಸಿಎಂ ಹೆಸರನ್ನು ಘೋಷಿಸಲು ಹೈಕಮಾಂಡ್ ಸಮಯ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದ್ದಾರೆ.
ಕರ್ನಾಟಕದ ಜನರು ಬಿಜೆಪಿಯನ್ನು ತಿರಸ್ಕರಿಸಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತಂದಿದ್ದಾರೆ. ಜನರು ನಮಗೆ ದಾಖಲೆಯ ಮತಗಳನ್ನು ನೀಡಿದ್ದಾರೆ. ನಾವು ಸಚಿವ ಸಂಪುಟ ರಚನೆಯ ನಂತರ ನಮ್ಮ ಪ್ರಣಾಳಿಕೆಯಲ್ಲಿ ಜನತೆಗೆ ನೀಡಿದ ಎಲ್ಲಾ 5 ಭರವಸೆಗಳನ್ನು ಜಾರಿಗೆ ತರುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಕರ್ನಾಟಕ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದೊಂದಿಗೆ ಗೆಲುವು ಸಾಧಿಸಿತು. ಬಿಜೆಪಿ 66, ಜೆಡಿಎಸ್ 19 ಹಾಗೂ ಇತರರು 4 ಸ್ಥಾನಗಳನ್ನು ಪಡೆದುಕೊಂಡಿದ್ದಾರೆ.