ಐಪಿಎಲ್ನ 62ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ಆರಂಭಿಕ ಆಟಗಾರ ಶುಭ್ಮನ್ ಗಿಲ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ವಿಶೇಷ ಎಂದರೆ ಈ ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಗಿಲ್, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಕೂಡ ಮುರಿದಿದ್ದಾರೆ. ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದು ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಗಿಲ್ ಕೇವಲ 22 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ವಿಶೇಷ ಎಂದರೆ ಕಡಿಮೆ ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿದರೂ ಗಿಲ್ ಈ ವೇಳೆ ಒಂದೇ ಒಂದು ಸಿಕ್ಸ್ ಬಾರಿಸಿರಲಿಲ್ಲ. ಇದುವೇ ಈಗ ದಾಖಲೆಯಾಗಿದೆ.
ಅಂದರೆ ಐಪಿಎಲ್ನಲ್ಲಿ ಸಿಕ್ಸ್ ಬಾರಿಸದೇ ಅತೀ ವೇಗವಾಗಿ ಅರ್ಧಶತಕ ಬಾರಿಸಿದ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. 2010 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸಚಿನ್ ತೆಂಡೂಲ್ಕರ್ ಕೇವಲ 23 ಎಸೆತಗಳಲ್ಲಿ ಹಾಫ್ ಸೆಂಚುರಿ ಪೂರೈಸಿದ್ದರು. ಈ ವೇಳೆ ಅವರು ಒಂದೇ ಒಂದು ಸಿಕ್ಸ್ ಬಾರಿಸಿರಲಿಲ್ಲ.
ಇದೀಗ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಒಂದೇ ಒಂದು ಸಿಕ್ಸ್ ಸಿಡಿಸದೇ ಕೇವಲ 22 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದಾರೆ. ಇದರೊಂದಿಗೆ ಕಳೆದ 1 ದಶಕಗಳಿಂದ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ವಿಶೇಷ ದಾಖಲೆ ಗಿಲ್ ಪಾಲಾಗಿದೆ.
ಇನ್ನು ಈ ಪಂದ್ಯದಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಗಿಲ್ 56 ಎಸೆತಗಳಲ್ಲಿ ಶತಕ ಪೂರೈಸಿದ್ದರು. ಅಲ್ಲದೆ ಅಂತಿಮವಾಗಿ 58 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 13 ಫೋರ್ನೊಂದಿಗೆ 101 ರನ್ ಬಾರಿಸಿ ಮಿಂಚಿದ್ದರು. ಇದರೊಂದಿಗೆ ಗುಜರಾತ್ ಟೈಟಾನ್ಸ್ ಪರ ಶತಕ ಬಾರಿಸಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಶುಭ್ಮನ್ ಗಿಲ್ ಪಾತ್ರರಾದರು.