ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ ಪ್ಲೇಆಫ್ಗೆ ಅರ್ಹತೆ ಪಡೆಯಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ವಿರಾಟ್ ಕೊಹ್ಲಿ ನೆರವಾಗಲಿದ್ದಾರೆಂದು ಆಸ್ಟ್ರೇಲಿಯಾ ಮಾಜಿ ಕ್ರಿಕೆಟಿಗ ಟಾಮ್ ಮೂಡಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಪ್ರಸ್ತುತ ನಡೆಯುತ್ತಿರುವ 2023ರ ಐಪಿಎಲ್ ಟೂರ್ನಿಯು ನಿರ್ಣಾಯಕ ಹಂತ ತಲುಪಿದೆ. ಅದರಂತೆ ಫಾಫ್ ಡುಪ್ಲೆಸಿಸ್ ನಾಯಕತ್ವದ ಆರ್ಸಿಬಿ ಐಪಿಎಲ್ ಪ್ಲೇಆಫ್ಗೆ ಅರ್ಹತೆ ಪಡೆಯಬೇಕೆಂದರೆ ಕೊನೆಯ ಎರಡೂ ಪಂದ್ಯಗಳಲ್ಲಿ ಗೆಲುವು ಅನಿವಾರ್ಯವಾಗಿದೆ. ಗುರುವಾರ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಆರ್ಸಿಬಿ ಕಾದಾಟ ನಡೆಸಲಿದೆ. ಈ ಪಂದ್ಯದಲ್ಲಿ ಸೋತರೆ ಆರ್ಸಿಬಿ ಪಾಲಿನ ಐಪಿಎಲ್ ಪ್ಲೇಆಫ್ ಹಾದಿ ಕಠಿಣವಾಗಲಿದೆ.
ಅಂದಹಾಗೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ಸೋಲು ಅನುಭವಿಸಿದ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳಿಗೆ ಅನುಕೂಲವಾಗಿದೆ. ಒಂದು ವೇಳೆ ಸನ್ರೈಸರ್ಸ್ ಹೈದರಾಬಾದ್ ವಿರುದ್ದ ಗುರುವಾರದ ಪಂದ್ಯದಲ್ಲಿ ಆರ್ಸಿಬಿ ಸೋತರೆ, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಲಖನೌ ಸೂಪರ್ ಜಯಂಟ್ಸ್ ತಂಡಗಳು ಪ್ಲೇಆಫ್ಗೆ ಅಧಿಕೃತವಾಗಿ ಅರ್ಹತೆ ಪಡೆಯಲಿವೆ.
ಸ್ಟಾರ್ ಸ್ಪೋರ್ಟ್ಸ್ ಜೊತೆ ಮಾತನಾಡಿದ ಟಾಮ್ ಮೂಡಿ, “2023ರ ಐಪಿಎಲ್ ಟೂರ್ನಿಯ ಮೊದಲ ಅವಧಿಯಲ್ಲಿ ಅತ್ಯುತ್ತಮ ಪ್ರದರ್ಶನ ತೋರಿತ್ತು. ಆದರೆ, ದ್ವಿತೀಯಾರ್ಧದಲ್ಲಿ ನಿರೀಕ್ಷಿತ ಪ್ರದರ್ಶನ ತೋರಿರಲಿಲ್ಲ. ಅಂದ ಹಾಗೆ ಕೊನೆಯ ಎರಡು ಪಂದ್ಯಗಳಲ್ಲಿ ಆರ್ಸಿಬಿ ಪೂರ್ಣ ಪ್ರಮಾಣದ ಪ್ರದರ್ಶನವನ್ನು ತೋರಬೇಕಾಗಿದೆ. ವಿರಾಟ್ ಕೊಹ್ಲಿ ಅವರಂಥ ಶ್ರೇಷ್ಠ ಆಟಗಾರ ತಂಡದಲ್ಲಿದ್ದು, ಐಪಿಎಲ್ ಪ್ಲೇಆಫ್ ತಲುಪಬಲ್ಲ ಆರ್ಸಿಬಿಗೆ ಖಂಡಿತಾ ನೆರವಾಗಲಿದ್ದಾರೆ,” ಎಂದು ಹೇಳಿದ್ದಾರೆ.