ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಪತನವಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ವಿಧಾನಸಭಾ ಚುನಾವಣೆಯಲ್ಲಿ ದೊಡ್ಡ ಸೋಲು ಅನುಭವಿಸಿದ ಬಳಿಕ ಬಿಜೆಪಿಯಲ್ಲಿ ವಿರೋಧ ಪಕ್ಷದ ನಾಯಕ ಯಾರಾಗ್ತಾರೆ ಎಂಬ ಚರ್ಚೆ ಜೋರಾಗಿದೆ. ಅದಲ್ಲದೇ ವಿಪಕ್ಷ ನಾಯಕನ ಸ್ಥಾನ ಪಡೆಯಲು ಕರ್ನಾಟಕ ಬಿಜೆಪಿಯಲ್ಲಿ ಭಾರೀ ಪೈಪೋಟಿ ನಡೆಯುತ್ತಿರುವುದು ಕಂಡುಬಂದಿದೆ.
ಈಗಾಗಲೇ ಬಿಜೆಪಿಯ ರಾಷ್ಟ್ರೀಯ ನಾಯಕರು ಬಿಜೆಪಿ ಶಾಸಕರ ಜೊತೆ ಅನೌಪಚಾರಿಕ ಸಭೆ ನಡೆಸಿ ಅಭಿಪ್ರಾಯವನ್ನು ಕಲೆಹಾಕುತ್ತಿದ್ದಾರೆ. ಆದರೆ, ಅಂತಿಮ ನಿರ್ಧಾರವನ್ನು ಜುಲೈನಲ್ಲಿ ನಡೆಯುವ ಬಜೆಟ್ ಅಧಿವೇಶನಕ್ಕೂ ಮುನ್ನ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಬಿಜೆಪಿಯ ಮೂಲಗಳು ತಿಳಿಸಿವೆ. ಆದರೆ, ವಿಪಕ್ಷ ನಾಯಕರ ಸ್ಥಾನಕ್ಕೆ ಪೈಪೋಟಿ ಹೆಚ್ಚಿರುವುದು ಬಿಜೆಪಿ ವರಿಷ್ಠರ ತಲೆನೋವಿಗೆ ಕಾರಣವಾಗಿದೆ.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಡಿಸಿಎಂ ಆರ್ ಅಶೋಕ್, ಮಾಜಿ ಸಚಿವ ಸುನೀಲ್ ಕುಮಾರ್ ಹಾಗೂ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಪಕ್ಷ ನಾಯಕ ಸ್ಥಾನದ ರೇಸ್ನಲ್ಲಿ ಮುಂದೆ ಇದ್ದಾರೆ. ವಿಪಕ್ಷ ನಾಯಕನ ಸ್ಥಾನ ನಿರ್ಣಾಯಕ ಆಗಿರುವುದರಿಂದ ಬಿಜೆಪಿ ಅಳೆದು ತೂಗಿ ನಿರ್ಧಾರವನ್ನು ತೆಗೆದುಕೊಳ್ಳುತ್ತಿದೆ. ಯಾಕೆಂದರೆ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳು ಹಾಗೂ ತಪ್ಪು ಹೆಜ್ಜೆಗಳನ್ನು ಜನರ ಮುಂದಿಟ್ಟು ಪ್ರತಿಯೊಂದು ಸಿಕ್ಕ ಅವಕಾಶಗಳನ್ನು ಯಶಸ್ವಿಯಾಗಿ ಬಳಸಿಕೊಳ್ಳಲು ವಿಪಕ್ಷ ನಾಯಕನ ಸ್ಥಾನ ಬಿಜೆಪಿಗೆ ಪ್ರಮುಖವಾಗಿದೆ.
ವಿಪಕ್ಷ ದಾಳಿಯನ್ನು ಸಮರ್ಥವಾಗಿ ಎದುರಿಸಲು ಕಾಂಗ್ರೆಸ್ನಲ್ಲಿ ಹಲವು ಹಿರಿಯ ಶಾಸಕರಿರುವ ಕಾರಣಕ್ಕಾಗಿ ಬಿಜೆಪಿಯಲ್ಲಿಯೂ ಅಂತಹದ್ದೇ ನಾಯಕನನ್ನು ಆಯ್ಕೆ ಮಾಡಲು ನಾಯಕರು ನಿರ್ಧರಿಸಿದ್ದಾರೆ ಎಂದು ಹಿರಿಯ ಬಿಜೆಪಿ ಶಾಸಕ ಹೇಳಿದ್ದಾರೆ. ವಿಪಕ್ಷ ನಾಯಕನ ಆಯ್ಕೆಗೂ ಮುನ್ನ ಪಕ್ಷದ ಹೈಕಮಾಂಡ್ ದಿಲ್ಲಿಯಿಂದ ವೀಕ್ಷಕರ ತಂಡವನ್ನು ಕಳಿಸಿ ಶಾಸಕರ ಅಭಿಪ್ರಾಯವನ್ನು ತೆಗೆದುಕೊಳ್ಳಲಿದ್ದಾರೆ ಎಂದು ಆರ್ ಅಶೋಕ್ ಹೇಳಿದ್ದಾರೆ.
ಇದರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ಥಾನಕ್ಕೆ ಪರ್ಯಾಯ ಆಯ್ಕೆಯನ್ನು ಬಿಜೆಪಿ ನಾಯಕರು ಹುಡುಕುತ್ತಿದ್ದಾರೆ. ಈಗಾಗಲೇ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ಕಾರಣವನ್ನು ಹುಡುಕಲು ಬಿಜೆಪಿ ನಾಯಕರು ಅನೌಪಚಾರಿಕ ಸಭೆಯನ್ನು ನಡೆಸಿದ್ದಾರೆ. ಈ ಸಭೆಗಳಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ (ಲಿಂಗಾಯಿತ), ಶೋಭಾ ಕರಂದ್ಲಾಜೆ, ಸಿಟಿ ರವಿ (ಒಕ್ಕಲಿಗರು), ವಿ ಸೋಮಣ್ಣ (ಲಿಂಗಾಯಿತ) ಮತ್ತು ಸುನೀಲ್ ಕುಮಾರ್ (ಈಡಿಗ) ಅವರು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ರೇಸ್ನಲ್ಲಿ ಇದ್ದಾರೆ.
ಹೊಸ ಕಾಂಗ್ರೆಸ್ ಸರ್ಕಾರವನ್ನು ಸಮರ್ಥವಾಗಿ ಎದುರಿಸಲು ಹಿಂದುತ್ವ ಮುಖಗಳಾದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಸುನೀಲ್ ಕುಮಾರ್ಗೆ ಪಟ್ಟ ಕಟ್ಟುವ ಬಗ್ಗೆ ಪಕ್ಷದಲ್ಲಿ ಚರ್ಚೆಯಾಗುತ್ತಿದೆ. ಏಕೆಂದರೆ, ಬಿಜೆಪಿ ಸರ್ಕಾರ ತೆಗೆದುಕೊಂಡ ಮತಾಂತರ ನಿಷೇಧ ಕಾಯಿದೆ ಹಾಗೂ ಗೋಹತ್ಯೆ ನಿಷೇಧ ಕಾಯಿದೆ ಸೇರಿ ಅನೇಕ ನಿರ್ಧಾರಗಳನ್ನು ವಾಪಸ್ ತೆಗೆದುಕೊಳ್ಳುವ ನಿರ್ಧಾರವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿರುವುದರಿಂದ ಅವುಗಳನ್ನು ಎದುರಿಸಲು ಪ್ರಬಲ ಹಿಂದುತ್ವದ ಮುಖ ಬಿಜೆಪಿಗೆ ಬೇಕಾಗಿದೆ.