ಬೆಂಗಳೂರು : ಬೆಂಗಳೂರು ನಗರದಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಪುನರ್ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಹೇಳಿದ್ದಾರೆ. ನಮ್ಮ ಸರ್ಕಾರದ ಅವಧಿಯಲ್ಲಿ ಪ್ರಾಮಾಣಿಕವಾಗಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಿದ್ದೆವು. ಶೇ.50ಕ್ಕೂ ಹೆಚ್ಚು ಒತ್ತುವರಿಗಳನ್ನು ಮುಲಾಜಿಲ್ಲದೆ ತೆರವುಗೊಳಿಸಿದ್ದೆವು.
ಇದೀಗ ಮತ್ತೆ ಒತ್ತುವರಿ ತೆರವು ಕಾರ್ಯಾಚರಣೆ ಪ್ರಾರಂಭ ಮಾಡುತ್ತೇವೆ ಎಂದು ಹೇಳಿದರು. ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸಭೆ ನಡೆಸಿ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಬೆಂಗಳೂರು ನಗರದಲ್ಲಿ ಮಳೆಯಿಂದ ಆಗುವ ಹಾನಿ ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ನೀರು ನಿಂತ ಕೆಳ ಸೇತುವೆಗಳಲ್ಲಿ ಸಾರ್ವಜನಿಕ ವಾಹನಗಳ ಸಂಚಾರ ನಿರ್ಬಂಧಿಸುವಂತೆ ಸೂಚನೆ ನೀಡಲಾಗಿದೆ. ಜತೆಗೆ ಅವುಗಳನ್ನು ವೈಜ್ಞಾನಿಕವಾಗಿ ಸರಿಪಡಿಸುವಂತೆಯೂ ತಿಳಿಸಲಾಗಿದೆ. ಚರಂಡಿ ಮಾರ್ಗಗಳಲ್ಲಿ ಹೂಳೆತ್ತಿ ಸರಾಗವಾಗಿ ಮಳೆ ನೀರು ಹರಿದು ಹೋಗುವಂತೆ ಮಾಡಬೇಕು ಎಂದು ಹೇಳಿದರು.