ಬೆಂಗಳೂರು: ಕಾಂಗ್ರೆಸ್ ನೀಡಿದ ಗ್ಯಾರಂಟಿ ಯೋಜನೆ ಜಾರಿಗೆ ಒತ್ತಡ ಹೆಚ್ಚಾಗುತ್ತಿದ್ದು, ಈ ಬಗ್ಗೆ ಚರ್ಚಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಬಂಧಿತ ಇಲಾಖೆಗಳ ಮುಖ್ಯಸ್ಥರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾ ದಲ್ಲಿ ನಡೆಯಲಿರುವ ಸಭೆಯಲ್ಲಿ ಗ್ಯಾರಂಟಿ ಯೋಜನೆ ಜಾರಿಗೊಳಿಸಬೇಕಿರುವ ಇಲಾಖೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಲಾಗುತ್ತದೆ. ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ಗೃಹ ಜ್ಯೋತಿ ಯೋಜನೆ, ಪ್ರತಿ ಮನೆಯ ಯಜಮಾನಿ ಮಹಿಳೆಗೆ 2,000 ರೂ. ನೀಡುವ ಗೃಹಲಕ್ಷ್ಮಿ, 10 ಕೆಜಿ ಅಕ್ಕಿ ನೀಡುವ ಅನ್ನಭಾಗ್ಯ,
ಮಹಿಳೆಯರಿಗೆ ಉಚಿತ ಪ್ರಯಾಣ, ಯುವಕರಿಗೆ ನಿರುದ್ಯೋಗಿ ಭತ್ಯೆ ನೀಡುವ ಯುವನಿಧಿ ಯೋಜನೆಗಳ ಬಗ್ಗೆ ಇಂದು ಸಿಎಂ ಇಂಧನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಆಹಾರ ಇಲಾಖೆ, ಸಾರಿಗೆ ಇಲಾಖೆ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.ಯೋಜನೆಗೆ ಫಲಾನುಭವಿಗಳ ಆಯ್ಕೆ, ಆರ್ಥಿಕ ವೆಚ್ಚ, ಅನುಷ್ಠಾನ ಮತ್ತಿತರ ಮಾಹಿತಿಗಳ ಸಹಿತ ಸಭೆಗೆ ಹಾಜರಾಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.