ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ಬಿಪರ್ಜಾಯ್ ಚಂಡಮಾರುತ ಪ್ರಭಾವದ ಹಿನ್ನೆಲೆ, ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜೂ.11 ಮತ್ತು ಜೂ.12ರಂದು ವ್ಯಾಪಕ ಮಳೆಯಾಗಲಿದ್ದು, ಎಲ್ಲಾ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ. ಇದೇ ಅವಧಿಯಲ್ಲಿ ದಕ್ಷಿಣ ಒಳನಾಡಿನಲ್ಲೂ ವ್ಯಾಪಕ ಮಳೆಯಾಗಲಿದೆ.
ಬಿಪರ್ಜಾಯ್ ಚಂಡಮಾರುತವು ಅರಬ್ಬಿ ಸಮುದ್ರದಲ್ಲಿ ತೀವ್ರ ಸ್ವರೂಪ ಪಡೆದಿದೆ, ಇದರ ಪರಿಣಾಮ ಕರ್ನಾಟಕ ಸೇರಿದಂತೆ ಇತರೆ ರಾಜ್ಯಗಳಲ್ಲಾಗಲಿದೆ. ಮುಂದಿನ 3-4 ದಿನಗಳಲ್ಲಿ ಕೆಲವು ರಾಜ್ಯಗಳಲ್ಲಿ ಭಾರಿ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರ್ನಾಟಕದ ಕರಾವಳಿ, ಗೋವಾ, ಕೇರಳ, ಲಕ್ಷದ್ವೀಪ, ತಮಿಳುನಾಡು, ಆಂಧ್ರಪ್ರದೇಶ, ರಾಜಸ್ಥಾನ, ಅಸ್ಸಾಂ, ಮಿಜೋರಾಂ, ಮಣಿಪುರ, ಅರಿಣಾಚಲಪ್ರದೇಶ, ಮೇಘಾಲಯದಲ್ಲೂ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರಿನಲ್ಲಿ ಭಾರಿ ಮಳೆಯಾಗಲಿದೆ, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನಲೆಯಲ್ಲಿ ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಅದರಂತೆ, ಜೂ.11 ರವರೆಗೆ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಕೋರಲಾಗಿದೆ.