ಜಿ.ಮನೋಹರನ್ ಹಾಗೂ ಕೆ.ಪಿ ಶ್ರೀಕಾಂತ್ ನಿರ್ಮಾಣದ, ದೇವನೂರು ಚಂದ್ರು ನಿರ್ದೇಶನದ ಹಾಗೂ ವಿನಯ್ ರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ ‘ಗ್ರಾಮಾಯಣ’ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿದೆ.
ಚಿತ್ರದ ಮೊದಲ ಸನ್ನಿವೇಶಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಆರಂಭ ಫಲಕ ತೋರಿದರೆ, . ಅಶ್ವಿನಿ ಪುನೀತ್ ರಾಜಕುಮಾರ್ ಕ್ಯಾಮೆರಾ ಚಾಲನೆ ಮಾಡಿದರು. ರಾಘವೇಂದ್ರ ರಾಜಕುಮಾರ್, ಮಂಗಳ ರಾಘವೇಂದ್ರ ರಾಜಕುಮಾರ್, ದುನಿಯಾ ವಿಜಯ್, ಧ್ರುವ ಸರ್ಜಾ, ರಾಜ್ ಬಿ ಶೆಟ್ಟಿ, ಆರ್ ಚಂದ್ರು, ಪವನ್ ಒಡೆಯರ್, ಸಿಂಪಲ್ ಸುನಿ ಸೇರಿದಂತೆ ಅನೇಕ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದರು.
ಕಳೆದ ನಾಲ್ಕು ವರ್ಷಗಳ ಹಿಂದೆ ಆರಂಭವಾಗಿದ್ದ ಗ್ರಾಮಾಯಣ ಸಿನಿಮಾ ಕೆಲವು ಕಾರಣದಿಂದಾಗಿ ನಿಂತು ಹೋಗಿತ್ತು. ಇದೀಗ ಮತ್ತೆ ಆರಂಭವಾಗಿದ್ದು ಗ್ರಾಮಾಯಣ ಇದು ಗ್ರಾಮದಲ್ಲೇ ನಡೆಯುವ ಕಥೆಯಾಗಿದೆ. ಸಿಂಪಲ್ ಸುನಿ ಅವರ ಮದುವೆ ಸಂದರ್ಭದಲ್ಲಿ ವಿನಯ್ ರಾಜಕುಮಾರ್ ಅವರನ್ನು ಭೇಟಿ ಮಾಡಿದ್ದೆ. ಅವರನ್ನು ನೋಡಿದ ಕೂಡಲೆ ಈ ಕಥೆಗೆ ಇವರೆ ಸೂಕ್ತ ನಾಯಕ ಅಂದುಕೊಂಡೆ. ಅವರು ಕಥೆ ಒಪ್ಪಿದರು. ನೀವು ಈವರೆಗೂ ನೋಡಿರದ ವಿನಯ್ ರಾಜಕುಮಾರ್ ಅವರನ್ನು ಈ ಚಿತ್ರದಲ್ಲಿ ನೋಡಬಹುದು. ಚಿಕ್ಕಮಗಳೂರು, ದೇವರಾಯಸಮುದ್ರ, ಅರಸಿಕೆರೆ, ಕಡೂರು ಸುತ್ತಮುತ್ತ ಚಿತ್ರೀಕರಣ ಮಾಡಲಿದ್ದೇವೆ. ಯಶಸ್ವಿನಿ ಅಂಚಲ್ ಛಾಯಾಗ್ರಹಣ ಹಾಗೂ ಪೂರ್ಣಚಂದ್ರ ತೇಜಸ್ವಿ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಅಚ್ಯುತಕುಮಾರ್, ಗೋಪಾಲಕೃಷ್ಣ ದೇಶಪಾಂಡೆ, ಅರುಣ್ ಸಾಗರ್, ಅಪರ್ಣ(ನಿರೂಪಕಿ), ಸೀತಾ ಕೋಟೆ, ಶ್ರೀನಿವಾಸ ಪ್ರಭು, ಮಂಜುನಾಥ್ ಹೆಗೆಡೆ ಮುಂತಾದವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ನಿರ್ಮಾಪಕರಾದ ಮನೋಹರನ್ ಹಾಗೂ ಕೆ.ಪಿ. ಶ್ರೀಕಾಂತ್ ಅವರಿಗೆ ಧನ್ಯವಾದ ಎಂದು ನಿರ್ದೇಶಕ ದೇವನೂರು ಚಂದ್ರು ಹೇಳಿದರು.
ಈಗಿನ ಯುವಕರ ದೃಷ್ಟಿಕೋನದಲ್ಲಿ ಹಳ್ಳಿ ಹೇಗೆ ಕಾಣಿಸುತ್ತದೆ ಎನ್ನುವುದೇ “ಗ್ರಾಮಾಯಣ. ನಾನು ಈವರೆಗೂ ಮಾಡಿರದ ಪಾತ್ರವಿದು. ಚಂದ್ರು ಅವರು ಕಥೆ ಚೆನ್ನಾಗಿ ಮಾಡಿಕೊಂಡಿದ್ದಾರೆ. ನಿರ್ಮಾಪಕರಿಗೆ ನನ್ನ ಧನ್ಯವಾದಗಳು ಎಂದರು ನಟ ವಿನಯ್ ರಾಜಕುಮಾರ್.