ಕಲಬುರಗಿ: ಈ ಹಿಂದಿನ ಬಿಜೆಪಿ ಸರಕಾರ ರಾಜ್ಯದಲ್ಲಿ ಅನುಷ್ಠಾನಕ್ಕೆ ತಂದಿರುವ ಕೃಷಿಕಾಯ್ದೆ ಕೂಡಲೆ ವಾಪಸ್ ಪಡೆಯಬೇಕೆಂದು ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ(Kodihalli Chandrasekhar) ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೃಷಿ ಕಾಯ್ದೆ ವಾಪಸ್ ಪಡೆಯುವುದಾಗಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಲಾಗಿತ್ತು. ಈಗ ರಾಜ್ಯದಲ್ಲಿ ಕಾಂಗ್ರೆಸ್ ಬಹುಮತ ಸರ್ಕಾರ ರಚಿಸಿರುವ ಹಿನ್ನೆಲೆಯಲ್ಲಿ ಕೃಷಿ ಕಾಯ್ದೆ ರದ್ದುಗೊಳಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೀನಮೇಷ ಎಣಿಸಬಾರದು ಎಂದು ಕಿವಿಮಾತು ಹೇಳಿದರು.
ವಿವಾದಾತ್ಮಕ ಕೃಷಿ ಕಾಯ್ದೆಯನ್ನು ವಾಪಸ್ ಪಡೆಯುವುದಾಗಿ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಾಗ್ಯೂ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah)ಅವರು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಹೇಳುತ್ತಿದ್ದಾರೆ. ಇದರಲ್ಲಿ ಪರಿಶೀಲಿಸುವುದು ಏನಿದೆ? ಈ ಹಿಂದೆ ಪ್ರತಿಪಕ್ಷದ ನಾಯಕರಾಗಿದ್ದಾಗ ಕಾಯ್ದೆಯನ್ನು ವಿರೋಧಿಸಿದವರಿಗೆ ಅದನ್ನು ರದ್ದುಪಡಿಸುವುದರಲ್ಲಿ ತೊಂದರೆ ಏನಿದೆ? ಎಂದು ಕೋಡಿಹಳ್ಳಿ ಪ್ರಶ್ನಿಸಿದರು.