ಗದಗ ;-ಬಾವಿಗೆ ಹಾರಿ ಸರಕಾರಿ ವೈದ್ಯ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ಜರುಗಿದೆ. 45 ವರ್ಷದ ಕುಮಾರ್ ಸ್ವಾಮಿ ಚಿದಾನಂದಯ್ಯ ಬರದೂರಮಠ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.
ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ವೈದ್ಯ, ತಡರಾತ್ರಿ ತಮ್ಮ ಸ್ವಂತ ಜಮೀನಿನ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಇವರು ಗಜೇಂದ್ರಗಡ ತಾಲೂಕಿನ ನಿಡಗುಂದಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಿರಿಯ ಆರೋಗ್ಯ ನಿರೀಕ್ಷಣಾ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ಸಾಕಷ್ಟು ದಿನಗಳಿಂದ ಪಾಶ್ವ೯ವಾಯು ರೋಗದಿಂದ ಬಳಲುತ್ತಿದ್ದರು. ಹೀಗಾಗಿ ಪಾಶ್ವ೯ವಾಯು ರೋಗದಿಂದ ಮಾನಸಿಕವಾಗಿ ನೊಂದು ಆತ್ಮ ಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.