ಮಂಡ್ಯ :- ಮದ್ದೂರು ತಾಲೂಕಿನ ಆತಗೂರು ಹೋಬಳಿಯಲ್ಲಿ ಚಿರತೆಗಳ ಹಾವಳಿ ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಭರವಸೆ ನೀಡಿದರು. ಮದ್ದೂರು ತಾಲೂಕಿನ ಚಿಕ್ಕಅಂಕನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಯೋಗಾ ಶಿಬಿರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಚಿರತೆಗಳ ಹಾವಳಿಯನ್ನು ನಿಯಂತ್ರಿಸುವ ಸಂಬಂಧ ಸರ್ಕಾರ ಹಾಗೂ ಸಂಬಂಧಿಸಿದ ಸಚಿವರ ಗಮನಕ್ಕೆ ತಂದು ಚಿರತೆಗಳನ್ನು ನಿಯಂತ್ರಿಸಲಾಗುವುದು ಎಂದು ಹೇಳಿದರು. ಶೈಕ್ಷಣಿಕ ವರ್ಷ ಶಾಲೆ ಆರಂಭವಾಗಿ ಹಲವು ದಿನಗಳು ಕಳೆದರೂ ಚಿರತೆ ಭೀತಿಯಿಂದ ವಿದ್ಯಾರ್ಥಿಗಳು ಶಾಲೆಯತ್ತ ಹೆಜ್ಜೆ ಹಾಕದಿರುವುದರಿಂದ ವಿದ್ಯಾರ್ಥಿಗಳ ಹಾಜರಾತಿ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಗ್ರಾಮಸ್ಥರು ಶಾಸಕರ ಗಮನ ಸೆಳೆದರು.
ಗ್ರಾಮದ ಹೊರವಲಯದ ಶ್ರೀ ನಂದಿ ಬಸವೇಶ್ವರ ಸ್ವಾಮಿ ದೇಗುಲದ ಸಮೀಪದ ಸರ್ಕಾರಿ ಪ್ರೌಢಶಾಲೆಯ ಸುತ್ತ ಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲ ವಾತಾವರಣ ಕಲ್ಪಿಸಿದೆ. ಈ ಹಿಂದೆ ಇದ್ದ ಸರ್ಕಾರಿ ಪದವಿ ಪೂರ್ವ ಕಾಲೇಜು ಸ್ಥಳಾಂತರಗೊಂಡಿದ್ದು, ಸದ್ಯಕ್ಕೆ ಈಗ ಪ್ರೌಢಶಾಲೆಗೆ ಈ ಭಾಗದ ವಿದ್ಯಾರ್ಥಿಗಳು ಚಿರತೆ ಹಾವಳಿಯಿಂದ ಶಾಲೆಗೆ ಬರಲು ಭಯ ಪಡುವ ಸ್ಥಿತಿ ನಿರ್ಮಾಣವಾಗಿದೆ.
ಎರಡು ವರ್ಷಗಳಿಂದ ಈಚೆಗೆ ಚಿಕ್ಕ ಅಂಕನಹಳ್ಳಿ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಾಗಿದ್ದು, ಈಗಾಗಲೇ 6 ಚಿರತೆಗಳನ್ನು ಸೆರೆ ಹಿಡಿದು ಬೇರೆ ಕಡೆಗೆ ಬಿಡಲಾಗಿದೆ. ನಂತರ ಚಿರತೆಗಳನ್ನು ಸೆರೆ ಹಿಡಿಯಲು ಅಧಿಕಾರಿಗಳು ಕ್ರಮವಹಿಸುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದರು. ಶಾಸಕ ಉದಯ್ ಮಾತನಾಡಿ ಚಿರತೆ ಸೆರೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳು ಯಾವುದೇ ಆತಂಕ ಪಡಬಾರದು ಎಂದು ಧೈರ್ಯ ತುಂಬಿದರು.