ಬೆಂಗಳೂರು ;– ರಸ್ತೆ ಸಾರಿಗೆ ನಿಗಮಗಳ ಆದಾಯ ಹೆಚ್ಚಿಸಲು ಯೋಜನೆ ರೂಪಿಸಿ ಅನುಷ್ಠಾನಗೊಳಿಸಿ ಎಂದು ಅಧಿಕಾರಿಗಳಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ.
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರುಗಳೊಡನೆ ಶನಿವಾರ ಕೆಎಸ್ಆರ್ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸಚಿವರು, ಸಾರಿಗೆ ಸಂಸ್ಥೆಗಳ ಬಸ್ ನಿಲ್ದಾಣಗಳಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು. ಪ್ರಮುಖವಾಗಿ ಆಸನಗಳ ವ್ಯವಸ್ಥೆ, ಶೌಚಾಲಯಗಳು, ಕುಡಿಯುವ ನೀರಿನ ವ್ಯವಸ್ಥೆಗಳ ಬಗ್ಗೆ ಗಮನಹರಿಸಲು ಸೂಚಿಸಿ, ತಾವೇ ಖುದ್ದು ಬಸ್ ನಿಲ್ದಾಣಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸುವುದಾಗಿ ಎಚ್ಚರಿಕೆ ನೀಡಿದರು. ಅಧಿಕಾರಿಗಳು ಸಹ ಬಸ್ ನಿಲ್ದಾಣಗಳಿಗೆ ಆಗಾಗ ಭೇಟಿ ನೀಡಬೇಕೆಂದು ಸೂಚಿಸಿದರು.
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಸಬಲೀಕರಣಕ್ಕೆ ಅನುಕೂಲವಾಗುವ ತುರ್ತು ಕ್ರಮಗಳಾದ ಹೊಸ ಬಸ್ಸುಗಳ ಸೇರ್ಪಡೆ, ಬಸ್ಸುಗಳ ಪುನಶ್ಚೇತನ ಕಾರ್ಯ, ಪರಿಣಾಮಕಾರಿ ಮಾಹಿತಿ ತಂತ್ರಜ್ಞಾನ ಬಳಕೆ, ಕಾರ್ಮಿಕಸ್ನೇಹಿ ಉಪಕ್ರಮಗಳು, ಸಿಬ್ಬಂದಿ ನೇಮಕ ಇತರೆ ವಿಷಯಗಳನ್ನು ಆದ್ಯತೆಯ ಮೇರೆಗೆ ಅನುಷ್ಠಾನಕ್ಕೆ ತರಬೇಕು ಎಂದು ತಿಳಿಸಿದರು.