ಬೆಂಗಳೂರು ;- ಲೋಕಾಯುಕ್ತ ಪೊಲೀಸರು ಕೆ ಆರ್ ಪುರಂ ತಹಶೀಲ್ದಾರ್ ಹಾಗೂ ಕೆಎಎಸ್ ಅಧಿಕಾರಿ ಅಜಿತ್ ರೈ ಅವರನ್ನು ವಶಕ್ಕೆ ಪಡೆದಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ವಶಕ್ಕೆ ಪಡೆಯಲಾಗಿದೆ.
ಲೋಕಾಯುಕ್ತ ಪೊಲೀಸರು ಬುಧವಾರ ಬೆಳ್ಳಂಬೆಳಗ್ಗೆ ಅಜಿತ್ ರೈ ಅವರಿಗೆ ಸೇರಿದ ಮನೆ ಹಾಗೂ ಕಚೇರಿ ಸೇರಿದಂತೆ 10 ಕಡೆಗಳಲ್ಲಿ ದಾಳಿ ನಡೆಸಿ ತಡರಾತ್ರಿಯವರೆಗೂ ಪರಿಶೀಲನೆ ಮುಂದುವರೆಸಿದ್ದರು. ಅದರಂತೆ ಇಂದು ಅವರನ್ನು ವಶಕ್ಕೆ ಪಡೆದಿದ್ದಾರೆ.
ಈ ಹಿಂದೆ ಕೆ ಆರ್ ಪುರದ ತಹಶೀಲ್ದಾರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಅಜಿತ್, ರಾಜಕಾಲುವೆ ಒತ್ತುವರಿದಾರರಿಗೆ ಸಹಕಾರ ನೀಡಿ ಹೈಕೋರ್ಟ್ನಿಂದ ತಡೆಯಾಜ್ಞೆ ತರಲು ನೆರವು ನೀಡಿದ್ದರು ಎಂಬ ಆರೋಪದಡಿ ಅವರನ್ನು ರಾಜ್ಯ ಸರ್ಕಾರ ಅಮಾನತು ಮಾಡಿತ್ತು. ಕೆಲ ದಿನಗಳ ಹಿಂದೆ ಅಮಾನತು ಆದೇಶವನ್ನು ಸರ್ಕಾರ ಹಿಂಪಡೆದುಕೊಂಡಿದ್ದರಿಂದ ಮತ್ತೆ ಕೆ ಆರ್ ಪುರ ತಹಶೀಲ್ದಾರ್ ಆಗಿ ಅಜಿತ್ ಬಂದಿದ್ದರು. ಕಳೆದ ಒಂದು ವಾರದ ಹಿಂದಷ್ಟೇ ಸ್ಥಳ ತೋರಿಸದೆ ಅಜಿತ್ ರೈ ಅವರನ್ನ ವರ್ಗಾವಣೆ ಮಾಡಲಾಗಿತ್ತು.