ಮುಂಬೈ: ಮಹಾರಾಷ್ಟ್ರ ಭೀಕರ ಬಸ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರು ತಲಾ ರೂ.5 ಲಕ್ಷ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಲಾ ರೂ.2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.
ದುರ್ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರು, ಬುಲ್ಧಾನ ಜಿಲ್ಲೆಯ ಸಿಂಧಖೇದರಾಜ ಬಳಿಯ ಸಮೃದ್ಧಿ ಹೆದ್ದಾರಿಯಲ್ಲಿ ಖಾಸಗಿ ಬಸ್ನ ಭೀಕರ ಅಪಘಾತದ ಅತ್ಯಂತ ದುಃಖವನ್ನು ತಂದಿದ್ದು, ಮೃತರ ಕುಟುಂಬಕ್ಕೆ ತೀವ್ರ ಸಂತಾಪವನ್ನು ಸೂಚಿಸುತ್ತೇನೆ. ಮೃತರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 5 ಲಕ್ಷ ರೂ ಪರಿಹಾರ ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಅಲ್ಲದೆ, ಘಟನೆಯ ಕುರಿತು ತನಿಖೆಗೆ ಆದೇಶಿಸಿದ್ದಾರೆ.
ಘಟನೆ ಸಂಬಂಧ ಬುಲ್ಧಾನ ಕಲೆಕ್ಟರ್ ಮತ್ತು ಪೊಲೀಸ್ ಅಧೀಕ್ಷಕರೊಂದಿಗೆ ದೂರವಾಣಿ ಕರೆ ಮೂಲಕ ಸಂಪರ್ಕಿಸಲಾಗಿದ್ದು, ಘಟನೆಯ ಬಗ್ಗೆ ಮಾಹಿತಿ ಪಡೆಯಲಾಗಿದೆ. ಗಾಯಾಳುಗಳ ನೆರವಿನ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗಿದೆ. ಗಾಯಾಳುಗಳಿಗೆ ಸರ್ಕಾರಿ ವೆಚ್ಚದಲ್ಲಿ ಕೂಡಲೇ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.