ಬೆಂಗಳೂರು: ಕಾಂಗ್ರೆಸ್ ಸರ್ಕಾರ ಜನರಿಗೆ ಕೊಟ್ಟಿರುವ ಭರವಸೆಗಳನ್ನು ಈಡೇರಿಸುತ್ತಿದೆ. ಬಿಜೆಪಿ ನಾಯಕರಿಗೆ ರಾಜ್ಯದ ಜನ ವಿಶ್ರಾಂತಿ ಪಡೆಯಲು ಮನೆಗೆ ಕಳುಹಿಸಿದ್ದು, ಅವರಿಗೆ ಮಾಡಲು ಕೆಲಸವಿಲ್ಲದೆ ಅನಗತ್ಯವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ಬಿಜೆಪಿಯವರು ಸದನದ ಒಳಗೆ ಹಾಗೂ ಹೊರಗೆ ಹೋರಾಟ ಮಾಡುತ್ತಿರುವ ಬಗ್ಗೆ ವಿಧಾನಸೌಧದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದರು.
ಕೇಂದ್ರ ಸರ್ಕಾರ ಹಾಗೂ ಭಾರತ ಆಹಾರ ಪ್ರಾಧಿಕಾರವು ಅಕ್ಕಿ ದಾಸ್ತನು ಇದ್ದರೂ ರಾಜ್ಯಕ್ಕೆ ನೀಡಲು ನಿರಾಕರಿಸಿದೆ. ಬಿಜೆಪಿ ನಾಯಕರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಮೊದಲು ಧರಣಿ ನಡೆಸಬೇಕು. ಕೇಂದ್ರದ ಬಡವರ ವಿರೋಧಿ ನಿಲುವಿನ ವಿರುದ್ಧ ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ತಂಡ ಹೋರಾಟ ಮಾಡಲಿ ಎಂದು ಕರೆ ನೀಡಿದರು.
ಎಚ್ಡಿಕೆ ಬೇಸರದ ಹೇಳಿಕೆ: ವರ್ಗಾವಣೆಗೆ ಮುಖ್ಯಮಂತ್ರಿ ಕಚೇರಿಯಲ್ಲಿ 30 ಲಕ್ಷ ರು. ನೀಡಬೇಕು ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ, ‘ಕುಮಾರಸ್ವಾಮಿ ಅವರು ಚುನಾವಣೆಯಲ್ಲಿ ಕಡಿಮೆ ಸ್ಥಾನ ಬಂದಿದೆ ಎಂಬ ಬೇಸರದಲ್ಲಿ ಮಾತನಾಡುತ್ತಿದ್ದಾರೆ. ಹೀಗಾಗಿ ಅವರ ಮಾತುಗಳಿಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ಸರ್ಕಾರದ ಯಾವುದೇ ಕಚೇರಿಯಲ್ಲಿ ಹಣ ಪಡೆದು ಕೆಲಸ ನೀಡಲಾಗುತ್ತಿಲ್ಲ. ಅವರ ಬಳಿ ದಾಖಲೆಗಳಿದ್ದರೆ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿ ತನಿಖೆ ಮಾಡಿಸಲಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅದಕ್ಕೆ ಅವಕಾಶವಿದೆ’ ಎಂದು ತಿರುಗೇಟು ನೀಡಿದರು.
ಪ್ರಚಾರ ನೀಡುತ್ತಿರುವುದಕ್ಕೆ ಧನ್ಯವಾದ: ಬಿಜೆಪಿಯವರು ಏನೇ ಮಾಡಿದರೂ ನಮ್ಮ ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಪ್ರಚಾರ ಸಿಗುತ್ತಿದೆ. ಇದಕ್ಕಾಗಿ ಅವರಿಗೆ ಧನ್ಯವಾದ ಹೇಳುತ್ತೇನೆ. ಜನರು ನಮಗೆ ಆಡಳಿತ ಮಾಡಲು ಅವಕಾಶ ನೀಡಿದ್ದು, ನಾವು ಜನಪರ ಆಡಳಿತ ನೀಡಿ ಅವರ ನಂಬಿಕೆ ಉಳಿಸಿಕೊಳ್ಳುತ್ತೇವೆ ಎಂದರು.
ಮೇಕೆದಾಟಿಗಾಗಿ ಮೋದಿ ಭೇಟಿಗೆ ಡಿಕೆಶಿ ನಿರ್ಧಾರ: ಮೇಕೆದಾಟು ನೀರಾವರಿ ಯೋಜನೆ ಜಾರಿಗೆ ಸಂಬಂಧಿಸಿದಂತೆ ಅನುಮತಿ ಕೋರಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿಯಾಗಿ ವಸ್ತುಸ್ಥಿತಿ ವಿವರಿಸಲು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿರ್ಧರಿಸಿದ್ದಾರೆ. ಮೇಕೆದಾಟು ಯೋಜನೆ ಕುರಿತಂತೆ ತಮಿಳುನಾಡು ಸರ್ಕಾರದ ವಿರೋಧ ವ್ಯಕ್ತಪಡಿಸುತ್ತಿದ್ದು, ಯೋಜನೆಯ ಡಿಪಿಆರ್ ಕುರಿತು ಸುಪ್ರೀಂಕೋರ್ಚ್ನಲ್ಲಿ ಅರ್ಜಿ ಸಲ್ಲಿಸಿದೆ.