ನಾನು 2023-24ನೇ ಸಾಲಿನ ಆಯವ್ಯಯವನ್ನು ಈ ಸದನದ ಮುಂದೆ ಮಂಡಿಸುತ್ತಿದ್ದೇನೆ.
- ಅಭಿವೃದ್ಧಿ ಹಾಗೂ ಸಾಮಾಜಿಕ ನ್ಯಾಯವನ್ನು ಒಟ್ಟೊಟ್ಟಿಗೆ ಕೊಂಡೊಯ್ಯುವಲ್ಲಿ ಈ ದೇಶದಲ್ಲಿ ಶತಶತಮಾನಗಳಿಂದ ಯಾವುದಾದರೊಂದು ನಾಡು ಶ್ರಮಿಸಿದ್ದರೆ ಅದು ಕರ್ನಾಟಕ ಎಂದು ಹೇಳಲು ನನಗೆ ಹೆಮ್ಮೆಯಿದೆ. ಬಸವಣ್ಣನವರಿಂದ ಹಿಡಿದು ನಾಲ್ವಡಿ ಕೃಷ್ಣರಾಜ ಒಡೆಯರ್ರವರೆಗೆ ಈ ನಮ್ಮ ನಾಡಿನಲ್ಲಿ ಅಭಿವೃದ್ಧಿ ಹಾಗೂ ಸಾಮಾಜಿಕ ನ್ಯಾಯದ ತೇರನ್ನು ಜೊತೆಜೊತೆಗೇ ಎಳೆಯಲಾಗಿದೆ. ಈ ಘನ ಪರಂಪರೆಯನ್ನು ನಾನು ಎಂದಿನಂತೆ ಈ ಬಾರಿಯೂ ಮುಂದುವರೆಸಲು ಶ್ರಮಿಸಿದ್ದೇನೆ.
- ಇದು ನಾನು ಮಂಡಿಸುತ್ತಿರುವ ಹದಿನಾಲ್ಕನೆಯ ಆಯವ್ಯಯ ಪತ್ರ. ಮುಖ್ಯಮಂತ್ರಿಯಾಗಿ, ವಿತ್ತೀಯ ಹೊಣೆಯನ್ನು ಹೊತ್ತು ಮಂಡಿಸುತ್ತಿರುವ ಏಳನೆಯ ಬಜೆಟ್. ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಆರು ಆಯವ್ಯಯ ಪತ್ರಗಳನ್ನು ಮಂಡಿಸಿದ್ದೆ. ನನ್ನ ಇಷ್ಟೂ ಆಯವ್ಯಯ ಪತ್ರಗಳ ಹಿಂದೆ ಯಾವ ಕಲ್ಯಾಣ ರಾಜ್ಯದ ಕನಸನ್ನು ಸಾಕಾರಗೊಳಿಸಲು ಈ ನಾಡಿನ ಶ್ರೇಷ್ಠ ಮನಸ್ಸುಗಳು ಬಯಸಿದ್ದವೋ ಅದನ್ನು ಈಡೇರಿಸಲೇಬೇಕೆನ್ನುವ ಉದ್ದೇಶ, ಬದ್ಧತೆಗಳು ಸ್ಪಷ್ಟವಾಗಿವೆ. ನಮ್ಮ ಪಕ್ಷದ ಧ್ಯೇಯೋದ್ದೇಶವೂ ಸಹ ಇದುವೇ ಆಗಿದೆ.
- ನನ್ನ ಹಿಂದಿನ ಎಲ್ಲ ಆಯವ್ಯಯಗಳಲ್ಲಿ ʻಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳುʼ ಎಂಬ ಮೂಲಮಂತ್ರದ, ಕರ್ನಾಟಕ ಮಾದರಿಯ ಆಡಳಿತವನ್ನು ನೀಡುವ ಪ್ರಯತ್ನ ಮಾಡುತ್ತಾ ಬಂದಿದ್ದೆ. ಪ್ರಸ್ತುತ ಮಂಡಿಸುತ್ತಿರುವ ಆಯವ್ಯಯ ಪತ್ರದಲ್ಲಿ ಈ ಮಾದರಿಯನ್ನು ಇನ್ನಷ್ಟು ಆಳವಾಗಿಸುವ, ವಿಸ್ತಾರವಾಗಿಸುವ ಪ್ರಯತ್ನವಿದೆ.
ʻಯಾವ ಕಾಲದ ಶಾಸ್ತ್ರವೇನು ಹೇಳಿದರೇನು,
ಎದೆಯ ದನಿಗೂ ಮಿಗಿಲು ಶಾಸ್ತ್ರವಿಹುದೇನು?ʼ
– ರಾಷ್ಟ್ರಕವಿ ಕುವೆಂಪು
- ಈ ಬಾರಿ ಕರ್ನಾಟಕದ ಜನತೆ ತಮ್ಮ ಮನದಿಂಗಿತವನ್ನು ಗಟ್ಟಿಯಾಗಿ, ಸಂತೋಷದಿಂದ, ಪ್ರಾಮಾಣಿಕವಾಗಿ ಹೇಳಿದ್ದಾರೆ. ಈ ನಾಡಿನ ಜನತೆ ಗಟ್ಟಿ ದನಿಯಲ್ಲಿ ಮಹತ್ವಪೂರ್ಣ ಸಂದೇಶವನ್ನು ಇಡೀ ದೇಶಕ್ಕೆ ಸ್ಪಷ್ಟವಾಗಿ ನೀಡಿದ್ದಾರೆ. ದುಡಿಮೆಯ ಗೌರವ ಎತ್ತಿ ಹಿಡಿಯುವ ತುಡಿತ, ಎಲ್ಲರ ಒಳಿತಿಗೆ ದುಡಿಯುವ ಕನಸು, ಮುಕ್ತ ವಾತಾವರಣದಲ್ಲಿ ಬದುಕುವ ಭರವಸೆ, ಸಾಮಾಜಿಕ ನ್ಯಾಯ ಹಾಗೂ ಸಮತೆ, ಸಮಾನತೆಯ ಮೇಲಿನ ಹಕ್ಕಿನ ಪ್ರತಿಪಾದನೆಯು ಕನ್ನಡಿಗರ ಅಪೇಕ್ಷೆಗಳ ಅಭಿವ್ಯಕ್ತಿಯಾಗಿದೆ. ಕುಟುಂಬ ಪೋಷಣೆ, ಸಾಮಾಜಿಕ ಸಾಮರಸ್ಯ ಹಾಗೂ ಆರ್ಥಿಕ ಸಮೃದ್ಧಿಯ ಆಶಯದೊಂದಿಗೆ ಸಮಾಜ ನಿರ್ಮಾಣ ಸಾಮಾನ್ಯ ಕನ್ನಡಿಗರ ಬದುಕಿನ ಹಾದಿಯಾಗಿದೆ.
- ಕರ್ನಾಟಕದ ಜನತೆಯ ಮುಂದೆ 2023-24ನೇ ಸಾಲಿನ ಆಯವ್ಯಯವನ್ನು ಮಂಡಿಸುವ ಈ ಸಂದರ್ಭದಲ್ಲಿ ಸರ್ಕಾರದ ಮೂಲ ಧ್ಯೇಯೋದ್ದೇಶಗಳನ್ನು ಜನರ ಮುಂದೆ ಪ್ರಸ್ತಾಪಿಸಲು ಬಯಸುತ್ತೇನೆ. ರಾಜ್ಯದ ಮಾನವ ಹಾಗೂ ಆರ್ಥಿಕ ಸಂಪನ್ಮೂಲಗಳ ಅತ್ಯುತ್ತಮ ನಿರ್ವಹಣೆ ಮತ್ತು ಆ ಮೂಲಕ ದಕ್ಷ ಆಡಳಿತ ಹಾಗೂ ಹಣಕಾಸಿನ ಸ್ಥಿರತೆಯನ್ನು ಸಾಧಿಸುವುದು ನಮ್ಮ ಸರ್ಕಾರದ ಗುರಿಯಾಗಿದೆ. ಇದರಲ್ಲಿ ಪ್ರಮುಖವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವುದು, ಸಾಮಾಜಿಕ ಸೇವೆ, ಮೂಲಸೌಕರ್ಯ ಒದಗಿಸುವುದು, ಸಮಾಜದ ದುರ್ಬಲ ವರ್ಗಗಳ ಕಲ್ಯಾಣ, ಪರಿಸರ ಸಂರಕ್ಷಣೆ, ಆರ್ಥಿಕ ಅಭಿವೃದ್ಧಿಗೆ ಉತ್ತೇಜನ, ರೈತರ ಏಳಿಗೆ, ಸಂಪನ್ಮೂಲಗಳ ನ್ಯಾಯಯುತ ಹಂಚಿಕೆ ಮತ್ತು ಸಮಾನ ಅವಕಾಶಗಳ ಸೃಜನೆ ಮಾಡುವುದು ನಮ್ಮ ಆದ್ಯತೆಯಾಗಿರುತ್ತದೆ.
- ಈ ಸಂದರ್ಭದಲ್ಲಿ ಗಿರೀಶ್ ಕಾರ್ನಾಡರ ಯಯಾತಿ ನಾಟಕದ ಈ ಸಾಲುಗಳು ನನಗೆ ನೆನಪಾಗುತ್ತವೆ: ʻಬೆಳಕಿಲ್ಲದ ಹಾದಿಯಲ್ಲಿ ನಡೆಯಬಹುದು ಪುರು, ಆದರೆ ಕನಸುಗಳಿಲ್ಲದ ಹಾದಿಯಲ್ಲಿ ನಡೆಯಲಿ ಹೇಗೆ?ʼ ಉತ್ತಮ ಆಡಳಿತ ಇಲ್ಲವಾದರೆ ನ್ಯಾಯವಿರದು; ದೂರದೃಷ್ಟಿಯಿರದು; ಗುರಿಯಿರದು; ಕರ್ನಾಟಕದ ಜನತೆಗಾಗಿ ಕನಸುಗಳೇ ಇರಲಾರವು.
- ಹೌದು, ರಾಜ್ಯವು ಅಂಧಕಾರ, ಅನ್ಯಾಯದಿಂದ ತತ್ತರಿಸಿತ್ತು. ಒಂದೆಡೆ ಪಟ್ಟಭದ್ರ ಹಿತಾಸಕ್ತಿಯಿಂದ ಕೂಡಿದ ಬಂಡವಾಳಶಾಹಿಗಳು ಮೆರೆದರೆ, ಇನ್ನೊಂದೆಡೆ ಜನಸಾಮಾನ್ಯರು ಮೂಕವೇದನೆ ಅನುಭವಿಸುತ್ತಿದ್ದರು. ಮಾರಕ ಸಾಂಕ್ರಾಮಿಕ ನಮ್ಮನ್ನು ಕಾಡಿದಾಗ, ದುರಾಡಳಿತ ಹಾಗೂ ಭ್ರಷ್ಟಾಚಾರ ಸಾರ್ವಜನಿಕರಿಗೆ ಎರವಾಯಿತು.
- ಈ ಕತ್ತಲು ಇದೀಗ ಅಂತ್ಯ ಕಂಡಿದೆ. ರಾಜ್ಯದ ಮಹಾಜನತೆ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ, ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ, ಅವರ ದೃಢಸಂಕಲ್ಪ ಮತ್ತು ಪ್ರಜ್ಞಾವಂತಿಕೆ ಪ್ರದರ್ಶಿಸಿದ್ದಾರೆ. ರಾಜ್ಯದ ಏಳು ಕೋಟಿ ಕನ್ನಡಿಗರ ಈ ಅಪಾರ ನಂಬಿಕೆಯನ್ನು ಎತ್ತಿಹಿಡಿಯಲು, ಉಜ್ವಲ ಭವಿಷ್ಯವನ್ನು ನಿರ್ಮಿಸಲು, ಅಂಧಕಾರದಲ್ಲಿರುವ ಇಂದಿನ ಭಾರತದಲ್ಲಿ ಲಕ್ಷಾಂತರ ಭಾರತೀಯರ ಕನಸುಗಳಿಗೆ ರೆಕ್ಕೆ ಮೂಡಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಶ್ರಮಿಸಲಿದೆ.
- ನಾನು ಸಾಮಾಜಿಕ ನ್ಯಾಯ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳಲ್ಲಿ ದೃಢ ವಿಶ್ವಾಸ ಹೊಂದಿದ್ದೇನೆ. ನಮ್ಮ ಸರ್ಕಾರವು ಸಂವಿಧಾನದ ಆಶಯಗಳಂತೆ ಸಮಾಜವಾದಿ, ಜಾತ್ಯತೀತ, ಪ್ರಜಾಸತ್ತಾತ್ಮಕ ಮೌಲ್ಯಗಳ ಹಾದಿಯಲ್ಲಿ ಕೆಲಸ ಮಾಡಲಿದೆ. ಈ ಸಂದರ್ಭದಲ್ಲಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ರವರು ಪ್ರತಿಪಾದಿಸಿರುವ ಸಾಮಾಜಿಕ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದಲ್ಲಿ ನಂಬಿಕೆಯನ್ನು ಮರುಸ್ಥಾಪಿಸಲು ನಾವು ಬದ್ಧರಾಗಿದ್ದೇವೆ ಎಂದು ಪುನರುಚ್ಛರಿಸಲು ಇಚ್ಛಿಸುತ್ತೇನೆ.
- ನಮ್ಮ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ರಾಜ್ಯವನ್ನು ಪ್ರಜ್ಞಾಪೂರ್ವಕವಾಗಿಯೇ ʻಸರ್ವಜನಾಂಗದ ಶಾಂತಿಯ ತೋಟʼ ಎಂದು ಉಲ್ಲೇಖಿಸಿದ್ದೇವೆ. ಏಕೆಂದರೆ ನಮಗೆ ವೈವಿಧ್ಯತೆ, ಎಲ್ಲರ ಒಳಗೊಳ್ಳುವಿಕೆಯಲ್ಲಿ ವಿಶ್ವಾಸವಿದೆಯೇ ಹೊರತು ಸರ್ವಾಧಿಕಾರಿ ಮನೋಭಾವದಲ್ಲಲ್ಲ. ನಾವು ವಿಭಿನ್ನ ಚಿಂತನೆಗಳ ಒಗ್ಗೂಡಿಸುವಿಕೆ, ಭಯಮುಕ್ತ ವಾತಾವರಣದಲ್ಲಿ ಬದುಕುವುದು ಮತ್ತು ಪರಸ್ಪರ ಅವಲಂಬನೆಯೊಂದಿಗೆ ಸಾರ್ವಜನಿಕ ಹಿತಾಸಕ್ತಿಯ ವಿಷಯಗಳ ಮೇಲೆ ಪರಿಣಾಮ ಬೀರುವ ತೀರ್ಮಾನಗಳನ್ನು ನ್ಯಾಯಯುತವಾಗಿ ಕೈಗೊಳ್ಳಲು ಬದ್ಧರಾಗಿದ್ದೇವೆ. ಭೇದ-ಭಾವ ತೋರುವುದು ಅಥವಾ ಧ್ರುವೀಕರಣ ಅಥವಾ ಸಮಾಜವನ್ನು ಒಡೆಯುವುದು ನ್ಯಾಯವಲ್ಲ. ನ್ಯಾಯವೆಂದರೆ ನಿಷ್ಪಕ್ಷಪಾತ, ನ್ಯಾಯವೆಂದರೆ ಸಹಾನುಭೂತಿ, ನ್ಯಾಯವೆಂದರೆ ಅವಕಾಶ ವಂಚಿತರಿಗೆ ಹೆಚ್ಚಿನ ಅನುಕೂಲ ಒದಗಿಸುವ ಮೂಲಕ ಆರ್ಥಿಕ ಅಸಮಾನತೆಯನ್ನು ನಿವಾರಿಸುವುದು.
- ನಮ್ಮ ಸರ್ಕಾರವು ಬಡವರು, ದುರ್ಬಲ ವರ್ಗದವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು, ಭೂ ರಹಿತ ಕೃಷಿ ಕಾರ್ಮಿಕರು ಮತ್ತು ಮಹಿಳೆಯರು ಸೇರಿದಂತೆ ಎಲ್ಲರಿಗೂ ಸಮಾನ ಅವಕಾಶ ಒದಗಿಸುವ ಮೂಲಕ ಎಲ್ಲರ ಕ್ಷೇಮಾಭಿವೃದ್ಧಿಯನ್ನು ಖಾತರಿಪಡಿಸಲು ಬದ್ಧವಾಗಿದೆ. ನಾವು ಒಪ್ಪಂದ ಹಾಗೂ ಅನುಕೂಲಸಿಂಧು ರಾಜಕಾರಣವನ್ನು ಧಿಕ್ಕರಿಸಿ, ಸಂಪೂರ್ಣ ಬಹುಮತವನ್ನು ನೀಡಿರುವ ಶ್ರೀಸಾಮಾನ್ಯರ ತೀರ್ಮಾನವನ್ನು ತಲೆಬಾಗಿಸಿ ಸ್ವೀಕರಿಸುತ್ತೇವೆ. ಹಿಂದಿನ ಸರ್ಕಾರ ಗಣನೀಯವಾಗಿ ನೀಡಿರುವ ಕೊಡುಗೆಯಾದ ಭ್ರಷ್ಟಾಚಾರವನ್ನು ಸಂಪೂರ್ಣವಾಗಿ ನಿಗ್ರಹಿಸಲು ನಮ್ಮ ಸರ್ಕಾರ ಶ್ರಮಿಸಲಿದೆ.
- ಆಯವ್ಯಯವೆನ್ನುವುದು ಹಣಕಾಸಿನ ನಿರ್ವಹಣೆಯ ಕಸರತ್ತು ಮಾತ್ರವೇ ಅಲ್ಲ. ನಮ್ಮ ಆದ್ಯತೆಗಳನ್ನು, ಗುರಿಗಳನ್ನು ನಿಚ್ಚಳವಾಗಿಸಿಕೊಳ್ಳುವ, ಸಾಕಾರಗೊಳಿಸಿಕೊಳ್ಳುವ ಸಾಧನ.
2023-24 ರ ಆಯವ್ಯಯವನ್ನು ರೂಪಿಸುವಾಗ ರಾಜ್ಯ ಸರ್ಕಾರವು ಬೇಡಿಕೆಗಳನ್ನು ವಾಸ್ತವಗಳೊಂದಿಗೆ ಹಾಗೂ ಸುಸ್ಥಿರ ಅಭಿವೃದ್ಧಿಯೊಂದಿಗೆ ಸಮನ್ವಯಗೊಳಿಸುವ ಮೂಲಕ ವಸ್ತುಸ್ಥಿತಿ ಆಧಾರಿತ, ಫಲಿತಾಂಶ ಕೇಂದ್ರಿತ, ಜನಪರ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲು ಪ್ರಜ್ಞಾಪೂರ್ವಕವಾಗಿ ತೀರ್ಮಾನಿಸಿದೆ.
- ಕಳೆದ ಕೆಲ ವರ್ಷಗಳಲ್ಲಿ ನೋಟು ರದ್ದತಿ, ಕೋವಿಡ್ ಸಾಂಕ್ರಾಮಿಕತೆ, ರಾಜಕೀಯ ಅಸ್ಥಿರತೆ, ಅನಿಯಂತ್ರಿತ ಬೆಲೆ ಏರಿಕೆ, ಅಭಿವೃದ್ಧಿಯ ಮುನ್ನೋಟದ ಕೊರತೆಯಿಂದಾಗಿ ರಾಜ್ಯದ ಜನತೆ ತತ್ತರಿಸಿ ಹೋಗಿದ್ದಾರೆ. ಹಾಗಾಗಿ, ಈ ಬಾರಿ ನಾವು ರಾಜ್ಯದ ಜನತೆಯನ್ನು ಈ ಸಂಕಷ್ಟಗಳ ಸುಳಿಯಿಂದ ಹೊರಗೆ ತರಲು, ಅವರ ಮೇಲಿನ ಹೊರೆಗಳನ್ನು ಇಳಿಸಲು ಮೊದಲಿಗೇ ಗ್ಯಾರಂಟಿ ಯೋಜನೆಗಳನ್ನು ರೂಪಿಸಿ ನಮ್ಮ ಆದ್ಯತೆಗಳನ್ನು ಸ್ಪಷ್ಟಪಡಿಸಿದ್ದೇವೆ.
ʻನಡೆಯದ ಹಾದಿಯಲ್ಲಿ ಎಡವಿದೆನೆಂದರೆ ಒಪ್ಪುವುದೆ ಅಯ್ಯಾ?
ಕಾಣದ ಮುಖದ ಕುಂದನೆಣಿಸಿದರೆ ಒಪ್ಪುವುದೆ ಅಯ್ಯಾ?
ಉಣ್ಣದ ಅಡಿಗೆಯ ರುಚಿಯ ಟೀಕಿಸಿದರೆ ಒಪ್ಪುವುದೆ ಅಯ್ಯಾ?
ನೋಡದುದನ್ನು ನೋಡಿದಂತೆ ವರ್ಣಿಸಿದರೆ ಒಪ್ಪುವುದೆ ಅಯ್ಯಾ?ʼ
– ಸಿದ್ದಯ್ಯ ಪುರಾಣಿಕ
- ನಾನು ನನ್ನ ಆಯವ್ಯಯ ಪ್ರಸ್ತಾವನೆ ಪ್ರಾರಂಭಿಸುವ ಮೊದಲು ನಮ್ಮ ಐದು ಗ್ಯಾರಂಟಿಗಳ ಬಗ್ಗೆ ಟೀಕೆ ಟಿಪ್ಪಣಿ ಮಾಡುವುದು, ಇಲ್ಲ ಸಲ್ಲದ ಸುಳ್ಳು ಸುದ್ದಿಗಳನ್ನು ಹಬ್ಬಿಸುವುದು, ಜನರಲ್ಲಿ ಗೊಂದಲ ಮೂಡಿಸುವುದು, ಇಂತಹ ಕೆಲಸ ಮಾಡುತ್ತಿರುವ ವಿರೋಧ ಪಕ್ಷದವರಿಗೆ ಒಂದೇ ಒಂದು ಮಾತು ಹೇಳಲು ಬಯಸುತ್ತೇನೆ. ಗ್ಯಾರಂಟಿ ಯೋಜನೆಗಳನ್ನು ಕೇವಲ ಬಿಟ್ಟಿ ಕೊಡುಗೆಗಳೆಂದು ಆಡಿಕೊಳ್ಳುವವರು ಒಮ್ಮೆ ನಮ್ಮ ಬಡವರ, ಶ್ರಮಿಕರ ಬದುಕನ್ನು ಗಮನಿಸಬೇಕಾಗಿದೆ. ತಾವು ವಿರೋಧ ಪಕ್ಷದ ಜವಾಬ್ದಾರಿಯನ್ನು ನಿರ್ವಹಿಸಿ; ಆದರೆ ಶ್ರೀಸಾಮಾನ್ಯರ ವಿವೇಚನೆಗೆ ಅಪಮಾನ ಮಾಡಬೇಡಿ ಎಂದು ವಿನಂತಿ ಮಾಡಿಕೊಳ್ಳುತ್ತೇನೆ. ಜನರು ಬುದ್ಧಿವಂತರು; ಜನರು ಪ್ರಜ್ಞಾವಂತರು. ಇಂತಹ ತರ್ಕರಹಿತ ಆಲೋಚನೆಗಳನ್ನು ನಂಬುವುದಿಲ್ಲ. ವಾಸ್ತವವೆಂದರೆ, ಜನ ನಿಮ್ಮಿಂದ ಬೇಸತ್ತು ಇಷ್ಟೊಂದು ಭಾರಿ ಬಹುಮತದಿಂದ ನಮ್ಮನ್ನು ಆರಿಸಿ
ವಿಧಾನ ಸೌಧಕ್ಕೆ ಕಳುಹಿಸಿದ್ದಾರೆ.