ಬೆಂಗಳೂರು: ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ನಂದಿಪರ್ವತ ಆಶ್ರಮದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರನ್ನು ಬರ್ಬರ ಹತ್ಯೆ ಮತ್ತು ಮೈಸೂರು ಜಿಲ್ಲೆ ಟಿ. ನರಸೀಪುರದ ಯುವಾ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಕೊಲೆ ಪ್ರಕರಣವನ್ನು ಅಸ್ತ್ರವಾಗಿ ಬಳಸಲು ಹೊರಟಿರುವ ಬಿಜೆಪಿ ಇಂದು ವಿಧಾನಸಭೆ ಮತ್ತು ವಿಧಾನ ಪರಿಷತ್ನಲ್ಲಿ ಧರಣಿ ನಡೆಸಲಿದೆ. ಬಿಜೆಪಿ ಹೀಗಾಗಿ ಈ ಎರಡೂ ಕೊಲೆಗಳನ್ನು ಖಂಡಿಸಿ ಇಂದು ವಿಪಕ್ಷ ಬಿಜೆಪಿ ಸದಸ್ಯರು ಉಭಯ ಸದನದಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಕರ್ನಾಟಕದಲ್ಲಿ 16ನೇ ವಿಧಾನಸಭೆಯ ಮೊದಲ ಅಧಿವೇಶನ ಆರಂಭವಾಗಿದೆ. ರಾಜ್ಯಪಾರ ಭಾಷಣದ ಮೇಲೆ ಚರ್ಚೆ ಆರಂಭವಾಗಿದೆ. ನಿನ್ನೆ (ಜು.10) ಅಧಿವೇಶನ ಆರಂಭವಾಗುತ್ತಿದ್ದಂತೆ ಚಿಕ್ಕೋಡಿಯ ಜೈನಮುನಿ ಕಾಮಕುಮಾರನಂದಿ ಮಹಾರಾಜರ ಹತ್ಯೆ ಮತ್ತು ಮೈಸೂರಿನ ಯುವಾ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಕೊಲೆ ಪ್ರಕರಣ ಸಾಕಷ್ಟು ಚರ್ಚೆಯಾಯಿತು. ವಿಪಕ್ಷ ಬಿಜೆಪಿ ನಾಯಕರು ಜೈನಮುನಿಯವರ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿದರು. ಅಲ್ಲದೇ ಪೊಲೀಸರ ತನಿಖೆಯಲ್ಲಿ ನಂಬಿಕೆ ಇಲ್ಲ ಎಂದರು.