ಬೆಂಗಳೂರು ;- ಖಾಸಗಿ ಕನ್ನಡ ಮಾಧ್ಯಮ ಶಾಲೆಗಳಿಗೆ ವೇತನಾನುದಾನ ಸಮಸ್ಯೆ ಪರಿಹರಿಸಲು ಪ್ರಯತ್ನ ಪಡಲಾದುತ್ತದೆ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿರುವ ಕಲ್ಯಾಣ ಕರ್ನಾಟಕ ಭಾಗದಲ್ಲಿ ಗುಣಮಟ್ಟದ ಶಿಕ್ಷಣ ಎಲ್ಲರಿಗೂ ದೊರಕಿಸುವಲ್ಲಿ ವೇತನಾನುದಾನ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅಭಿಪ್ರಾಯಪಟ್ಟರು.
ಹಿಂದಿನ ಸರ್ಕಾರದ ಅವಧಿಯಲ್ಲಿ ಶಿಕ್ಷಣದ ಹಕ್ಕು ಕಾಯ್ದೆಯ ನಿಯಮ 4ಕ್ಕೆ ತಿದ್ದುಪಡಿ ತಂದಿರುವ ಪರಿಣಾಮ ಇಂದು 9 ಲಕ್ಷಕ್ಕೂ ಅಧಿಕ ಮಕ್ಕಳು ಖಾಸಗಿ ಶಾಲೆಗಳಲ್ಲಿ ಶಿಕ್ಷಣ ಪಡೆಯುವುದರಿಂದ ವಂಚಿತರಾಗಿದ್ದಾರೆ ಎಂದು ನನಗೆ ತಿಳಿಸಲಾಗಿದೆ. ಈ ಬಗ್ಗೆ ಅಂಕಿ-ಅಂಶ ತರಿಸಿಕೊಂಡು ಸಿದ್ದರಾಮಯ್ಯ ಅವರ ಜೊತೆಗೆ ಚರ್ಚಿಸಿ ನ್ಯಾಯ ಒದಗಿಸಲು ಪ್ರಯತ್ನಿಸುತ್ತೇನೆ ಎಂದು ಹೇಳಿದರು.
ಕೇಂದ್ರದಲ್ಲಿ ಯುಪಿಎ ಸರ್ಕಾರದ ಕಾರ್ಯಕಾಲದಲ್ಲಿ ಬಡ ಮಕ್ಕಳಿಗೂ ಉತ್ತಮ ಶಿಕ್ಷಣ ಒದಗಿಸುವ ಮಹತ್ವಾಕಾಂಕ್ಷೆಯೊಂದಿಗೆ ಆರ್ಟಿಇ ಕಾಯ್ದೆ ಜಾರಿಗೆ ತರಲಾಗಿದೆ. ಇದರಿಂದ ಲಕ್ಷಾಂತರ ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆದಿದ್ದಾರೆ. ಕಲ್ಯಾಣ ಕರ್ನಾಟಕ ಭಾಗಕ್ಕಂತೂ ಈ ಕಾಯ್ದೆ ವರದಾನವಾಗಿತ್ತು. ಈ ಬಗ್ಗೆ ಪುನರ್ ಪರಿಶೀಲಿಸುವ ಅಗತ್ಯವಿದೆ. ಆರ್ಟಿಇ ನಿಯಮ ಬದಲಾವಣೆಯಿಂದ ಆಗಿರುವ ತೊಡಕು ನಿವಾರಿಸಿ ಕಾಂಗ್ರೆಸ್ ಸರ್ಕಾರ ಬಡವರ ಪರವಾದ ಸರ್ಕಾರ ಎಂಬುದನ್ನು ನಿರೂಪಿಸುತ್ತದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.