ಬೆಂಗಳೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೂಚನೆ ಮೇರೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿಯವರಿಗೆ ಕೊಕ್ ನೀಡಲಾಗಿದೆ.ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯ ರೇಸ್ನಲ್ಲಿ ಸಿ.ಟಿ.ರವಿಯವರು ಮುಂಚೂಣಿಯಲ್ಲಿದ್ದಾರೆ ಎಂದು ಬಲ್ಲಮೂಲಗಳಿಂದ ತಿಳಿದುಬರುತ್ತಿದೆ.
ಸದ್ಯ ಇರುವ ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಅಧಿಕಾರಾವಧಿ ಕಳೆದ ವರ್ಷ ಆಗಸ್ಟ್ನಲ್ಲಿಯೇ ಮುಕ್ತಾಯವಾಗಿದ್ದು, ವಿಧಾನಸಭೆ ಚುನಾವಣೆ ಹಿನ್ನೆಲೆ ಅವರನ್ನೇ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಸಲಾಗಿತ್ತು. ಹೀನಾಯ ಸೋಲಿನ ಬೆನ್ನಲ್ಲಿಯೇ ಅಧ್ಯಕ್ಷ ಸ್ಥಾನದ ಬದಲಾವಣೆಗೆ ಕೂಗು ಕೇಳಿಬಂದಿತ್ತು. ಫಲಿತಾಂಶ ಬಂದು 75 ದಿನಗಳಾದರೂ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೊಸ ವ್ಯಕ್ತಿ ಬಂದಿಲ್ಲ. ಈ ಹಿನ್ನೆಲೆ ಸಿಟಿ ರವಿ ಅವರು ಮುಂದಿನ ರಾಜ್ಯಾಧ್ಯಕ್ಷರಾಗುವ ಸಾಧ್ಯತೆ ಇದೆ.
ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡ ಕೂಡ ಬಿಜೆಪಿ ಬೆಳವಣಿಗೆಗಳ ಬಗ್ಗೆ ಮಾತನಾಡಿದ್ದರು. ಈ ವೇಳೆ ಸಿಟಿ ರವಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ವಿರೋಧ ಪಕ್ಷದ ನಾಯಕನನ್ನಾಗಿ ಮಾಡಲು ಬಿಜೆಪಿಯಲ್ಲಿ ಚರ್ಚೆ ನಡೆಯುತ್ತಿದೆ ಎಂದು ಹೇಳಿದ್ದರು. ಇದೀಗ ಎಚ್ಡಿಡಿ ಹೇಳಿಕೆ ಬಿಜೆಪಿಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.