ನವದೆಹಲಿ: ಮೋದಿ ಉಪನಾಮದ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದೆ. ‘ಮೋದಿ ಉಪನಾಮ’ ಹೇಳಿಕೆಗಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದೆ. ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ, ಪಿಎಸ್ ನರಸಿಂಹ ಮತ್ತು ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು ಶುಕ್ರವಾರ ಪ್ರಕರಣದ ವಿಚಾರಣೆ ನಡೆಸಿತು. ಈ ವೇಳೆ ಸೂರತ್ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿದೆ.
ರಾಹುಲ್ ಗಾಂಧಿ ಹೇಳಿಕೆಯಲ್ಲಿ ಉತ್ತಮ ಅಭಿರುಚಿಯಿಲ್ಲ ಎಂಬುದರಲ್ಲಿ ಸಂದೇಹವಿಲ್ಲ. ಸಾರ್ವಜನಿಕ ಜೀವನದಲ್ಲಿ ವ್ಯಕ್ತಿಗಳು ಸಾರ್ವಜನಿಕ ಭಾಷಣ ಮಾಡುವಾಗ ಎಚ್ಚರಿಕೆ ವಹಿಸಬೇಕು. ರಾಹುಲ್ ಗಾಂಧಿ ಹೆಚ್ಚು ಎಚ್ಚರಿಕೆಯಿಂದ ಇರಬೇಕಿತ್ತು ಎಂದು ಮಧ್ಯಂತರ ಆದೇಶ ನೀಡುವಾಗ ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಗರಿಷ್ಠ ಶಿಕ್ಷೆ ವಿಧಿಸಲು ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರು ಯಾವುದೇ ಕಾರಣವನ್ನು ನೀಡಿಲ್ಲ. ಅಂತಿಮ ತೀರ್ಪಿನವರೆಗೆ ಅಪರಾಧದ ಆದೇಶವನ್ನು ತಡೆಹಿಡಿಯಬೇಕಾಗಿದೆ ಎಂದು ಸುಪ್ರೀಂ ಹೇಳಿದೆ.
ರಾಹುಲ್ ಗಾಂಧಿ ಅವರ ಆದೇಶದ ಪರಿಣಾಮಗಳು ವ್ಯಾಪಕವಾಗಿವೆ. ಸಾರ್ವಜನಿಕ ಜೀವನದಲ್ಲಿ ಮುಂದುವರಿಯುವ ಗಾಂಧಿಯವರ ಹಕ್ಕು ಮಾತ್ರವಲ್ಲದೆ ಅವರನ್ನು ಆಯ್ಕೆ ಮಾಡಿದ ಮತದಾರರ ಮೇಲೂ ಪರಿಣಾಮ ಬೀರುತ್ತದೆ ಎಂದು ಕೋರ್ಟ್ ಹೇಳಿದೆ. ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ನ ಸೂರತ್ ಮ್ಯಾಜಿಸ್ಟ್ರೇಟ್ ಕೋರ್ಟ್ ವಿಧಿಸಿರುವ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ್ದ ಗುಜರಾತ್ ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಆದೇಶದ ವಿರುದ್ಧ ಜು.15 ರಂದು ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು.
ರಾಹುಲ್ ಅವರು 2019ರ ಏಪ್ರಿಲ್ 13 ರಂದು ಕೋಲಾರದಲ್ಲಿ ನಡೆದ ಲೋಕಸಭಾ ಚುಣಾವಣಾ ಪ್ರಚಾರ ಸಭೆಯಲ್ಲಿ ಭಾಷಣ ಮಾಡಿದ್ದರು. ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ, ಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮ ಏಕಿದೆ ಎಂದು ಪ್ರಶ್ನಿಸಿದ್ದರು. ಈ ಬಗ್ಗೆ ಗುಜರಾತ್ ಶಾಸಕ ಪೂರ್ಣೇಶ್ ಮೋದಿ ಅವರು, ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ಪ್ರಕರಣದಲ್ಲಿ ರಾಹುಲ್ ಅವರು ಎರಡು ವರ್ಷ ಶಿಕ್ಷೆಗೆ ಗುರಿಯಾಗಿ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿದ್ದಾರೆ.