ಬೆಂಗಳೂರು : ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಬಹುಮುಖ್ಯ ದತ್ತಿ ಪ್ರಶಸ್ತಿಯಾದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಮಾಜಿ ಪ್ರಧಾನಿಗಳ ನಿವಾಸದಲ್ಲಿ ನಡೆದ ಸರಳ ಸಮಾರಂಭದಲ್ಲಿ ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ಮುಖ್ಯ ನ್ಯಾಯಮೂರ್ತಿ ಎಂ.ಎನ್. ವೆಂಕಟಾಚಲಯ್ಯ ಹಾಗೂ ಕಸಾಪ ಅಧ್ಯಕ್ಷ ನಾಡೋಜ ಮಹೇಶ್ ಜೋಶಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು, ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿಯನ್ನು ಸಂತೋಷದಿಂದ ಸ್ವೀಕಾರ ಮಾಡಿದ್ದೇನೆ. ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಈ ಕಾರ್ಯಕ್ರಮ ನಡೆಯಬೇಕಿತ್ತು. ಅನಾರೋಗ್ಯದ ಕಾರಣಕ್ಕೆ ವೈದ್ಯರ ಸಲಹೆಯ ಮೇರೆಗೆ ನಾನು ಆ ಕಾರ್ಯಕ್ರಮಕ್ಕೆ ಹಾಜರಾಗುವುದು ಕಷ್ಟ ಸಾಧ್ಯವಿತ್ತು. ಹೀಗಾಗಿ, ನನ್ನ ಮನೆಗೇ ಬಂದು ಪ್ರಶಸ್ತಿ ನೀಡಿದ್ದಾರೆ. ಅವರಿಗೆ ನಾನು ಕೃತಜ್ಞನಾಗಿದ್ದೇನೆ ಎಂದು ತಿಳಿಸಿದ್ದಾರೆ.