ನಾಗಮಂಗಲ: ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನ ಆಗಲಿದೆ ಎಂದು ಅವರು ಕನಸು ಕಾಣುತ್ತಲೇ ಇರಲಿ. ನಾವು ಮಾತ್ರ ಇದೇ ರೀತಿ ಅಧಿಕಾರದಲ್ಲಿ ಮುಂದುವರಿಯುತ್ತೇವೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದರು.
ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿ ಇಡೀ ಸಚಿವ ಸಂಪುಟ, ಎಲ್ಲ ಶಾಸಕರು ಒಗ್ಗಟ್ಟಾಗಿದ್ದೇವೆ. ಲೋಕಸಭಾ ಚುನಾವಣೆಯಲ್ಲೂ 20 ಸ್ಥಾನಗಳಲ್ಲಿ ಗೆಲ್ಲುತ್ತೇವೆ. 5 ವರ್ಷ ಕಾಲ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸುಭದ್ರವಾಗಿರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮುಂಬರುವ ಲೋಕಸಭಾ ಚುನಾವಣೆ ನಂತರ ಚಾಮರಾಜನಗರ- ಜೀವರ್ಗಿ ರಾಷ್ಟ್ರೀಯ ಹೆದ್ದಾರಿಯ ಶ್ರೀರಘುರಾಮಪುರ ಗೇಟ್ ಮಾರ್ಗವಾಗಿ ಮೇಲುಕೋಟೆಗೆ,
ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿಗೆ ಕ್ರಮ ವಹಿಸುವುದಾಗಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ತಾಲೂಕಿನ ಗೊಟಕಹಳ್ಳಿಯಲ್ಲಿ ನೂತನವಾಗಿ ನಿರ್ಮಿಸಿರುವ ಅಂಗನಾಡಿ ಕೇಂದ್ರ ಮತ್ತು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಕಟ್ಟಡ ಉದ್ಘಾಟಿಸಿ ಮಾತನಾಡಿ, ಗ್ರಾಮದ ಕೆರೆಗೆ ನೀರು ತುಂಬಿಸಲು ಕಾಲುವೆ ನಿರ್ಮಾಣ ಸೇರಿದಂತೆ ಇನ್ನಿತರೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.