ಬೆಂಗಳೂರು,ಡಿಸೆಂಬರ್ 27: ಕೊರೊನಾ ಕಾಲದಲ್ಲಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಂದಾಜು 40 ಸಾವಿರ ಕೋಟಿ ರೂಪಾಯಿಗಳ ಭ್ರಷ್ಟಾಚಾರ ಎಸಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನೇರವಾಗಿ ಆರೋಪಿಸುವ ಮೂಲಕ ಬಿಜೆಪಿ ಸರ್ಕಾರ 40% ಕಮಿಷನ್ ಸರ್ಕಾರವಾಗಿತ್ತು ಎನ್ನುವ ನಮ್ಮ ಆರೋಪಕ್ಕೆ ಸಾಕ್ಷಿ ಒದಗಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕೊರೊನಾ ಚಿಕಿತ್ಸೆ ಮತ್ತು ನಿಯಂತ್ರಣದ ಹೆಸರಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರ ಸುಮಾರು ರೂ.4,000 ಕೋಟಿ ರೂಪಾಯಿಗಳ ಭ್ರಷ್ಟಾಚಾರ ಮಾಡಿದೆ ಎಂದು ಪತ್ರಿಕಾಗೋಷ್ಠಿ ಕರೆದು ದಾಖಲೆಗಳ ಸಮೇತ ನಾವು ಆರೋಪ ಮಾಡಿದ್ದೆವು. ಯತ್ನಾಳ್ ಅವರ ಆರೋಪವನ್ನು ಗಮನಿಸಿದರೆ ನಮ್ಮ ಅಂದಾಜಿಗಿಂತಲೂ ಹತ್ತು ಪಟ್ಟು ಹೆಚ್ಚಿನ ಭ್ರಷ್ಟಾಚಾರ ನಡೆದಿರುವಂತೆ ಕಾಣುತ್ತಿದೆ. ನಮ್ಮ ಆರೋಪ ಕೇಳಿ ಹೌಹಾರಿ ಬಂದು ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಆಗಿನ ಸಚಿವರ ದಂಡು ಈಗ ಎಲ್ಲಿ ಅಡಗಿ ಕೂತಿದೆ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.