ಬೆಂಗಳೂರು : ರಾಜ್ಯದಲ್ಲಿ ಮಹಿಳಾ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಂಡಿದ್ದೇವೆ. ಸರ್ಕಾರದ ಮೇಲೆ ಅನಾವಶ್ಯಕವಾಗಿ ಸುಳ್ಳು ಆರೋಪಗಳನ್ನು ಹೊರಿಸುವುದು ಸರಿಯಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.
ಸದಾಶಿವನಗರದ ತಮ್ಮ ನಿವಾಸದ ಬಳಿ ಶನಿವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಿರ್ಭಯಾ ಯೋಜನೆಯಡಿ ಮಹಿಳಾ ಸುರಕ್ಷತಾ ಕಾರ್ಯಕ್ರಮಗಳನ್ನು ಕೈಗೊಂಡಿದ್ದೇವೆ. ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುವರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಹಾವೇರಿ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ ಎಫ್ಎಸ್ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ತನಿಖೆ ಇನ್ನು ಪೂರ್ಣಗೊಂಡಿಲ್ಲ. ಈ ಮೊದಲೇ ರಾಜ್ಯದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ ಎಂದು ಆರೋಪಿಸುವುದು ಸರಿಯಲ್ಲ ಎಂದು ಹೇಳಿದರು.
ಶಾಸಕ ಟಿ.ಬಿ.ಜಯಚಂದ್ರ ಅವರ ಪುತ್ರ ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವುದರಿಂದ ಮಾಜಿ ಸಂಸದ ಮುದ್ದ ಹನುಮೇಗೌಡ ಅವರು ಪಕ್ಷ ಸೇರ್ಪಡೆಗೆ ವಿರೋಧಿಸುತ್ತಿರಬಹುದು. ಯಾರೇ ಟಿಕೆಟ್ ಆಕಾಂಕ್ಷಿಯಾಗಿದ್ದರು ಸಹ ಪಕ್ಷದ ರಾಜ್ಯ ಚುನಾವಣಾ ಸಮಿತಿ ಒಪ್ಪಿ ಕೇಂದ್ರ ಚುನಾವಣಾ ಸಮಿತಿಗೆ ಶಿಫಾರಸ್ಸು ಮಾಡಬೇಕು. ಬಳಿಕ ಅಂತಿಮ ನಿರ್ಧಾರ ಹೈಕಮಾಂಡ್ ಮಾಡಲಿದೆ ಎಂದು ತಿಳಿಸಿದರು.