ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಇಂಡಿಯಾ ಮೈತ್ರಿಕೂಟದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಇಂಡಿಯಾ ಮೈತ್ರಿಕೂಟ ಈ ಬಗ್ಗೆ ಅಧಿಕೃತ ಘೋಷಣೆ ಮಾಡಬೇಕಿದೆ.
ಬಿಹಾರದ ಮುಖ್ಯಮಂತ್ರಿ ಮತ್ತು ಜನತಾ ದಳ (ಯುನೈಟೆಡ್) ಅಧ್ಯಕ್ಷ ನಿತೀಶ್ ಕುಮಾರ್ ಅವರನ್ನು ಮೈತ್ರಿಕೂಟದ ಸಂಚಾಲಕರನ್ನಾಗಿ ಆಯ್ಕೆ ಮಾಡಲಾಗಿದೆ. ಆದರೆ ಅವರು ಸಂಚಾಲಕ ಸ್ಥಾನದಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ.
ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹಾಗೂ ಸಮಾಜವಾದಿ ಪಕ್ಷದ (ಎಸ್ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಇಂದಿನ ಸಭೆಗೆ ಗೈರಾಗಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.
ನಡೆದ ಸಭೆಯಲ್ಲಿ ಖರ್ಗೆ, ಎನ್ಸಿಪಿ ಅಧ್ಯಕ್ಷ ಶರದ್ ಪವಾರ್, ಡಿಎಂಕೆ ಅಧ್ಯಕ್ಷ ಮತ್ತು ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್, ಎಎಪಿ ಸಂಚಾಲಕ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಮೈತ್ರಿಕೂಟದ ಸಮನ್ವಯ ಸಮಿತಿಯ ಸದಸ್ಯರಾಗಿರುವ ಪಕ್ಷಗಳ ಮುಖ್ಯಸ್ಥರು ಭಾಗವಹಿಸಿದ್ದರು ಎಂದು ತಿಳಿದು ಬಂದಿದೆ.
ಇಂಡಿಯಾ ಒಕ್ಕೂಟದ ಕೆಲವು ಪಕ್ಷಗಳ ನಾಯಕರು ನಿತೀಶ್ ಕುಮಾರ್ ಅವರನ್ನು ಸಂಚಾಲಕರನ್ನಾಗಿ ನೇಮಿಸುವ ಆಲೋಚನೆಯ ಬಗ್ಗೆ ಟಿಎಂಸಿ ನಿಜವಾಗಿಯೂ ಉತ್ಸಾಹ ಹೊಂದಿಲ್ಲ ಎಂದಿದ್ದರು ಎನ್ನಲಾಗಿದೆ. ಖರ್ಗೆ ಅವರನ್ನು ಮೈತ್ರಿಕೂಟದ ಅಧ್ಯಕ್ಷರನ್ನಾಗಿ ಮತ್ತು ನಿತೀಶ್ ಕುಮಾರ್ ಅವರನ್ನು ಸಂಚಾಲಕರನ್ನಾಗಿ ನೇಮಿಸಬೇಕು ಎಂದು ಜೆಡಿಯು ಅಭಿಪ್ರಾಯಪಟ್ಟಿತ್ತು.