ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಲೋಕಸಭಾ ಚುನಾವಣೆಗೆ ಮುನ್ನ ಜಾರಿಗೆ ತರುವುದಾಗಿ ಗೃಹ ಸಚಿವ ಅಮಿತ್ ಶಾಹೇಳಿದ್ದಾರೆ. ಖಾಸಗಿ ಮಾಧ್ಯಮವೊಂದರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿಎಎ ದೇಶದ ಕಾಯ್ದೆಯಾಗಿದೆ. ಅದನ್ನು ಖಂಡಿತವಾಗಿಯೂ ಲೋಕಸಭಾ ಚುನಾವಣೆಗೆ ಮುನ್ನವೇ ನೋಟಿಫೈ ಮಾಡಲಾಗುವುದು ಅದರಲ್ಲಿ ಯಾವುದೇ ಗೊಂದಲ ಇಲ್ಲ ಎಂದರು.
ಸಿಎಎ ಕಾಂಗ್ರೆಸ್ ಸರ್ಕಾರದ ಭರವಸೆಯಾಗಿತ್ತು. ದೇಶ ವಿಭಜನೆಯಾದಾಗ ಮತ್ತು ಆ ದೇಶದಲ್ಲಿದ್ದ ಅಲ್ಪಸಂಖ್ಯಾತರು ಕಿರುಕುಳಕ್ಕೊಳಗಾದಾಗ, ನಿರಾಶ್ರಿತರಿಗೆ ಭಾರತದಲ್ಲಿ ಆಶ್ರಯ ನೀಡಿ ಭಾರತೀಯ ಪೌರತ್ವವನ್ನು ನೀಡಲಾಗುವುದು ಎಂದು ಕಾಂಗ್ರೆಸ್ ಭರವಸೆ ನೀಡಿತ್ತು. ಈಗ ಕಾಂಗ್ರೆಸ್ ಆ ಭರವಸೆಯಿಂದ ಹಿಂದಕ್ಕೆ ಸರಿಯುತ್ತಿದೆ ಎಂದು ಶಾ ದೂರಿದರು.
ನಮ್ಮ ದೇಶದಲ್ಲಿ ಅಲ್ಪಸಂಖ್ಯಾತರು ಮತ್ತು ವಿಶೇಷವಾಗಿ ನಮ್ಮ ಮುಸ್ಲಿಂ ಸಮುದಾಯವನ್ನು ಪ್ರಚೋದಿಸಲಾಗುತ್ತಿದೆ. ಕಾಯ್ದೆಯಲ್ಲಿ ಯಾವುದೇ ನಿಬಂಧನೆ ಇಲ್ಲದ ಕಾರಣ ಸಿಎಎ ಯಾರ ಪೌರತ್ವವನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ. ಸಿಎಎ ಬಾಂಗ್ಲಾದೇಶ ಮತ್ತು ಪಾಕಿಸ್ತಾನದಲ್ಲಿ ಕಿರುಕುಳಕ್ಕೊಳಗಾದ ನಿರಾಶ್ರಿತರಿಗೆ ಪೌರತ್ವ ನೀಡುವ ಕಾಯ್ದೆಯಾಗಿದೆ ಎಂದು ವಿವರಿಸಿದರು.