ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಎಲ್ಲಾ ಸ್ಥಾನಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ (ಹೇಳಿದ್ದಾರೆ. ಈ ಮೂಲಕ ಅವರು ಮುಂದಿನ ದಿನಗಳಲ್ಲಿ ಬಿಜೆಪಿ ನೇತೃತ್ವದ ಎನ್ಡಿಎಗೆ ಸೇರುವ ಸುಳಿವು ನೀಡಿದ್ದಾರೆ.
ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, I.N.D.I.A ಒಕ್ಕೂಟದ ಜೊತೆ ಸೀಟು ಹಂಚಿಕೆಯ ಮಾತುಕತೆ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಇತರ ರಾಜಕೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲ್ಲ. ಬದಲಾಗಿ ತನ್ನ ಸ್ವಂತ ಬಲದ ಮೇಲೆ ಏಕಾಂಗಿಯಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದೆ ಎಂದು ಸ್ಪಷ್ಟಪಡಿಸಿದರು.
ಅಟಲ್ ಬಿಹಾರಿ ವಾಜಪೇಯಿಅವರು ಚುಕ್ಕಾಣಿ ಹಿಡಿದಾಗ ನ್ಯಾಷನಲ್ ಕಾನ್ಫರೆನ್ಸ್ ಎನ್ಡಿಎ ಭಾಗವಾಗಿತ್ತು. ಕಳೆದ ತಿಂಗಳು ಜಮ್ಮು ಪ್ರದೇಶದ ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ನ ಹಲವಾರು ಪ್ರಮುಖ ನಾಯಕರು ಬಿಜೆಪಿಗೆ ಸೇರ್ಪಡೆಗೊಂಡರು. 2019 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಅಬ್ದುಲ್ಲಾ ಅವರ ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ತಲಾ ಮೂರು ಸ್ಥಾನಗಳನ್ನು ಗೆದ್ದವು.