ಟಾಟಾ ಸಮೂಹದ ಭಾಗವಾಗಿರುವ ಏರ್ ಇಂಡಿಯಾ (AIR India) ಮತ್ತು ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (TASL) ರಾಜ್ಯದಲ್ಲಿ ವಿವಿಧ ಯೋಜನೆಗಳಿಗೆ 2,300 ಕೋಟಿ ರೂ. ಹೂಡಿಕೆ ಮಾಡಲು ಮುಂದಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಸಮ್ಮುಖದಲ್ಲಿ ರಾಜ್ಯ ಸರ್ಕಾರದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿತು.
ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ (MB Patil) ನೇತೃತ್ವದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಏರ್ ಇಂಡಿಯಾದ ಮುಖ್ಯ ವಾಣಿಜ್ಯ ವ್ಯವಹಾರ ಅಧಿಕಾರಿ ನಿಪುಣ್ ಅಗರವಾಲ್ ಹಾಗೂ ಟಿಎಎಸ್ಎಲ್ ಸಿಇಒ ಸುಕರಣ್ ಸಿಂಗ್ ಒಡಂಬಡಿಕೆ ಪತ್ರಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡರು. ಈ ಮಾಹಿತಿಯನ್ನು ಸಿಎಂ ತಮ್ಮ ಸೋಶಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಸಿಎಂ X ಖಾತೆಯಲ್ಲಿ ಏನಿದೆ?
25,000ಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ: ಟಾಟಾ ಸಮೂಹದ ಈ ಹೂಡಿಕೆಯಿಂದ ನೇರವಾಗಿ 1,650 ಉದ್ಯೋಗಗಳು ಸೃಷ್ಟಿಯಾಗಲಿವೆ. ಒಟ್ಟು ಹೂಡಿಕೆಯ ಪೈಕಿ ಏರ್ ಇಂಡಿಯಾ ಕಂಪನಿಯು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ವಿಮಾನಗಳ ನಿರ್ವಹಣೆ, ದುರಸ್ತಿ ಮತ್ತು ಓವರ್-ಹಾಲ್ (ಎಂಆರ್ ಒ) ಘಟಕವನ್ನು ಸ್ಥಾಪಿಸಲು 1,300 ಕೋಟಿ ರೂ. ಹೂಡಿಕೆ ಮಾಡುತ್ತಿದೆ. ಇದರಿಂದಾಗಿ 1,200 ಜನರಿಗೆ ನೇರವಾಗಿ ಉದ್ಯೋಗ ಸಿಗಲಿದ್ದು, ಪರೋಕ್ಷವಾಗಿ 25 ಸಾವಿರಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಲಿವೆ. ಇಡೀ ಭಾರತದಲ್ಲೇ ಇದು ಮೊಟ್ಟಮೊದಲ ಯೋಜನೆಯಾಗಿದೆ.