ನವದೆಹಲಿ: ಚುನಾವಣಾ ಆಯೋಗದಲ್ಲಿ ಖಾಲಿ ಇರುವ ಎರಡು ಆಯುಕ್ತರ ಹುದ್ದೆಗೆ ನಿವೃತ್ತ ಇಬ್ಬರು ಐಎಎಸ್ ಅಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಸುಖಬೀರ್ ಸಿಂಗ್ ಸಂಧು ಮತ್ತು ಜ್ಞಾನೇಶ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಇಂದು ಮಧ್ಯಾಹ್ನ ಮಾಧ್ಯಮಗಳಿಗೆ ತಿಳಿಸಿದರು.
ಮುಂಬರುವ ಲೋಕಸಭೆ ಚುನಾವಣೆಗೆ ಚುನಾವಣಾ ಆಯೋಗವು ತಯಾರಿ ನಡೆಸುತ್ತಿದ್ದು, ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರಿಗೆ ನೆರವಾಗಲು ಇಬ್ಬರು ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಧೀರ್ ರಂಜನ್ ಚೌಧರಿ ಭಾಗಿಯಾಗಿದ್ದರು.
ಸಭೆ ಮುಗಿದ ಕೂಡಲೇ ತಮ್ಮ ನಿವಾಸದಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅಧೀರ್ ರಂಜನ್ ಚೌಧರಿ, ಇಬ್ಬರು ಚುನಾವಣಾ ಆಯೋಗಗಳ ಆಯ್ಕೆಗೆ ಆರು ಹೆಸರುಗಳು ಸಮಿತಿಯ ಮುಂದೆ ಬಂದಿದ್ದವು. ಹೆಚ್ಚಿನ ಸದಸ್ಯರು ಸಂಧು ಮತ್ತು ಕುಮಾರ್ ಅವರ ಹೆಸರನ್ನು ಅಂತಿಮಗೊಳಿಸಿದ್ದಾರೆ ಎಂದು ಹೇಳಿದರು. ಸಂಧು ಮತ್ತು ಜ್ಞಾನೇಶ್ ಕುಮಾರ್ 1988 ಬ್ಯಾಚ್ನ ನಿವೃತ್ತ ಐಎಎಸ್ ಅಧಿಕಾರಿಗಳಾಗಿದ್ದಾರೆ. ಸಂಧು ಉತ್ತರಾಖಂಡ್ ಕೇಡರ್ನಿಂದ ಬಂದಿದ್ದರೆ, ಕುಮಾರ್ ಕೇರಳ ಕೇಡರ್ನಿಂದ ಆಯ್ಕೆ ಆಗಿದ್ದರು.
ಸಂಧು ಅವರು ಈ ಹಿಂದೆ ಉತ್ತರಾಖಂಡದ ಮುಖ್ಯ ಕಾರ್ಯದರ್ಶಿ ಮತ್ತು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧ್ಯಕ್ಷ ಸೇರಿದಂತೆ ಪ್ರಮುಖ ಸರ್ಕಾರಿ ಹುದ್ದೆಗಳನ್ನು ನಿಭಾಯಿಸಿದ್ದಾರೆ. ಜ್ಞಾನೇಶ್ ಕುಮಾರ್ ಅವರು ಸಂಸದೀಯ ವ್ಯವಹಾರಗಳ ಸಚಿವಾಲಯ ಮತ್ತು ಅಮಿತ್ ಶಾ ನೇತೃತ್ವದ ಸಹಕಾರ ಸಚಿವಾಲಯದಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಅಷ್ಟೇ ಅಲ್ಲದೇ ಗೃಹ ಸಚಿವಾಲಯದ ಕಾಶ್ಮೀರ ವಿಭಾಗದ ಮುಖ್ಯಸ್ಥರಾಗಿ ಆರ್ಟಿಕಲ್ 370 ರದ್ದತಿಯನ್ನು ಮೇಲ್ವಿಚಾರಣೆ ಮಾಡಿದ್ದರು.