ಬೆಂಗಳೂರು: ಮಂಡ್ಯದಿಂದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಕೊನೆಗೂ ಮುನಿಸು ಮರೆತು ಸಂಸದೆ ಸುಮಲತಾ ಅವರನ್ನ ಭೇಟಿಯಾಗಿದ್ದು, ಊಹಾ-ಪೋಹಗಳಿಗೆ ತೆರೆ ಎಳೆದಿದ್ದಾರೆ. ಬೆಂಗಳೂರಿನಲ್ಲಿರುವ ಅವರ ನಿವಾಸದಲ್ಲಿ ಸುಮಲತಾರನ್ನ ಭೇಟಿಯಾಗಿದ್ದಾರೆ.
ಇದೇ ವೇಳೆ ಮಂಡ್ಯ ಕ್ಷೇತ್ರದಲ್ಲಿ ಮೈತ್ರಿ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ಸುಮಲತಾರ ನಿವಾಸಕ್ಕೆ ಭೇಟಿ ನೀಡುತ್ತಿದ್ದಂತೆ ಪುತ್ರ ಅಭಿಷೇಕ್ ಮತ್ತು ಚಲನಚಿತ್ರ ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ಕುಮಾರಸ್ವಾಮಿ ಅವರನ್ನ ಸ್ವಾಗತಿಸಿದರು. ಬಳಿಕ ಸುಮಲತಾ ಅವರು ಹೆಚ್ಡಿಕೆ ಅವರನ್ನ ಸ್ವಾಗತಿಸಿದ್ದಾರೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಸುಮಲತಾ ಅವರು ಪಕ್ಷೇತರ ಸ್ಪರ್ಧೆ ಮಾಡಿ ಗೆಲುವು ಸಾಧಿಸಿದ್ದರು. ಈ ವೇಳೆ ಕುಮಾರಸ್ವಾಮಿ ಹಾಗೂ ಸುಮಲತಾ ಅವರ ನಡುವೆ ಮಾತಿನ ಸಮರ ನಡೆದಿತ್ತು. ಇದೀಗ ಬದಲಾದ ರಾಜಕೀಯದಲ್ಲಿ ಸುಮಲತಾ ಅವರು ಬಿಜೆಪಿ-ಜೆಡಿಎಸ್ ಮೈತ್ರಿಯನ್ನು ಬೆಂಬಲಿಸುವಂತೆ ಸುಮಲತಾರೊಂದಿಗೆ ಮಾತುಕತೆ ನಡೆಸಿದ್ದಾರೆ.