ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು, ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಅವರು, ರಾಜ್ಯಕ್ಕೆ ಮತ್ತೆ ಇಂದು ಹಾರಿ ಬಂದ ಅಮಿತ್ ಶಾ ಅವರಿಗೆ ಹಾರ್ದಿಕ ಸ್ವಾಗತ.. ಸುಸ್ವಾಗತ. ನಿಮ್ಮ ಡಬಲ್ ಎಂಜಿನ್ ಕರ್ನಾಟಕ ಬಿಜೆಪಿ ಸರ್ಕಾರ ಭರ್ತಿ 40% ಕಮೀಷನ್ ಉಡಾಯಿಸುತ್ತಿದೆ ಎನ್ನುವುಕ್ಕೆ ನಿಮ್ಮ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರನ ಕಂತೆ ಕಂತೆಗಳ ಪುರಾಣವೇ ದೊಡ್ಡ ಪುರಾವೆ ಎಂದರು.
ಮುಂದವರೆದು “ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹಾಗೂ ಸರ್ ಎಂ.ವಿಶ್ವೇಶ್ವರಯ್ಯನವರ ಕನಸಿನ ಕೂಸಾದ ಸಾಬೂನು ಕಾರ್ಖಾನೆಯನ್ನು ಸ್ವಚ್ಚಗೊಳಿಸುವುದು ಎಂದರೆ ಇದೇನಾ? ನಿಮ್ಮ “ಸ್ವಚ್ಚ ಭಾರತ್” ಪರಿಕಲ್ಪನೆಯೇ ಅದ್ಭುತ!! ವಾರೆವ್ಹಾ.. ಅಮಿತ್ ಶಾ ಅವರೇ!! ಅಮಿತ್ ಶಾ ಅವರೇ ಈಗ ಹೇಳಿ.. ಕರ್ನಾಟಕ ಯಾರ ಎಟಿಎಂ? ರಾಜ್ಯವನ್ನು ಭ್ರಷ್ಟಾಚಾರ ಮುಕ್ತ ಮಾಡುತ್ತೇವೆ ಎಂದು ನೀವು ಹೇಳಿದ್ದು ಈ ಅರ್ಥದಲ್ಲಿಯಾ? ಭ್ರಷ್ಟಾಚಾರ ಮುಕ್ತ ಮಾಡುವುದು ಎಂದರೆ ಅಪ್ಪನ ಪರವಾಗಿ ಪುತ್ರರತ್ನ ಕಂತೆಕಂತೆ ಕಟ್ಟುಗಳನ್ನು ಸ್ವಂತ ಎಟಿಎಂಗೆ ಇಳಿಸುವುದಾ? ಸಾಬೂನು ಕಾರ್ಖಾನೆಯನ್ನು ಸಖತ್ತಾಗಿ ಸಾರಿಸಿ ಗಂಡಾಂತರ ಮಾಡುವುದಾ?” ಎಂದು ಪ್ರಶ್ನಿಸಿದ್ದಾರೆ.