ಮಂಡ್ಯ :- ಅಡುಗೆ ಅನಿಲ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ಬಿಜೆಪಿ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಮದ್ದೂರು ಪಟ್ಟಣದಲ್ಲಿ ಕೆಪಿಸಿಸಿ ಸದಸ್ಯ ಎಸ್.ಗುರುಚರಣ್ ನೇತೃತ್ವದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದರು.
ಮದ್ದೂರು ತಾಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಮದ್ದೂರು ತಾಲೂಕು ಕಛೇರಿಗೆ ಮುತ್ತಿಗೆ ಹಾಕಿದ ನೂರಾರು ಕಾರ್ಯಕರ್ತರು ಖಾಲಿ ಸಿಲಿಂಡರ್ ಗಳನ್ನು ಪ್ರದರ್ಶನ ಮಾಡಿ ಧರಣಿ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಜನ ವಿರೋಧಿ ನೀತಿಯನ್ನು ತೀವ್ರವಾಗಿ ಖಂಡಿಸಿದರು.
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಪದೇ ಪದೇ ಏರಿಕೆ ಮಾಡುತ್ತಿದೆ. ಜನ ಸಾಮಾನ್ಯರು ಬೆಲೆ ಏರಿಕೆಯಿಂದ ಸಂಕಷ್ಟಕ್ಕೆ ಒಳಗಾಗಿದ್ದರೂ ಸಹ ಸ್ಥಳೀಯ ಶಾಸಕರು ಮತ್ತು ಜನಪ್ರತಿನಿಧಿಗಳು ಸರ್ಕಾರದ ವಿರುದ್ಧ ಯಾವುದೇ ಪ್ರತಿಭಟನೆ ನಡೆಸದೇ ಮೌನ ವಹಿಸಿದ್ದಾರೆ ಎಂದು ಧರಣಿ ನಿರತ ಕಾರ್ಯಕರ್ತರು ಆರೋಪಿಸಿದರು.
ಕೆಪಿಸಿಸಿ ಸದಸ್ಯ ಎಸ್.ಗುರುಚರಣ್ ಮಾತನಾಡಿ, ದೇಶದಲ್ಲಿ ಈ ಹಿಂದೆ ಆಡಳಿತ ನಡೆಸಿದ ಕಾಂಗ್ರೆಸ್ ಜನ ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಬೆಲೆ ಏರಿಕೆಯನ್ನು ನಿಯಂತ್ರಣದಲ್ಲಿರಿಸಿತ್ತು. ಆನಂತರ ಅಧಿಕಾರಕ್ಕೆ ಬಂದ ಬಿಜೆಪಿ ಬಂಡವಾಳ ಶಾಹಿಗಳ ಪರ ತೀರ್ಮಾನ ಕೈಗೊಂಡು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಬಡವರು ಮತ್ತು ಮಧ್ಯಮ ವರ್ಗದ ಜನರನ್ನು ಸುಲಿಗೆ ಮಾಡುತ್ತಿದೆ ಎಂದು ಆರೋಪಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ನಾಗೇಗೌಡ ಮಾತನಾಡಿ ಪದೇ ಪದೇ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ಅಸಮಾಧಾನಗೊಂಡಿರುವ ರಾಜ್ಯದ ಜನರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಲು ತೀರ್ಮಾನಿಸಿದ್ದಾರೆ ಎಂದು ಭವಿಷ್ಯ ನುಡಿದರು.
ಪ್ರತಿಭಟನೆಯಲ್ಲಿ ನಿಕಟ ಪೂರ್ವ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ, ಜಿ.ಪಂ ಮಾಜಿ ಅಧ್ಯಕ್ಷ ಸುರೇಶ್ ಕಂಠಿ, ಜಿಲ್ಲಾ ಕಾರ್ಯದರ್ಶಿ ಅಜ್ಜಹಳ್ಳಿ ರಾಮಕೃಷ್ಣ, ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ದೇಶಹಳ್ಳಿ ಮೋಹನ್ ಕುಮಾರ್, ಎಸ್ಸಿ ಎಸ್ಟಿ ಘಟಕದ ಅಧ್ಯಕ್ಷ ದೊರೆಸ್ವಾಮಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ ಮುಖಂಡರಾದ ಕೆ.ಟಿ.ರಾಜಣ್ಣ, ಶಂಕರಲಿಂಗಯ್ಯ, ಕಬ್ಬಾಳಯ್ಯ, ಎಂ.ಪಿ.ಅಮರ್ ಬಾಬು, ಅರುಣ್, ಸಿದ್ದು, ರಾಘವಾ, ಡಾಬಾ ಮಹೇಶ್ ಮತ್ತಿತರರು ಇದ್ದರು.
ವರದಿ : ಗಿರೀಶ್ ರಾಜ್ AIN ಮಂಡ್ಯ