ಹಾಸನ: ಇದೆ ತಿಂಗಳು ರಂದು ಜಿಲ್ಲಾ ಮಟ್ಟದ ಫಲಾನುಭವಿಗಳ ಸಮ್ಮೇಳನ ಮತ್ತು ಹಾಸನ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ದಿ ಕಾಮಗಾರಿಗಳ ಗುದ್ದಲಿ ಪೂಜೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ ಗೋಪಾಲಯ್ಯ ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿವಿಧ ಯೋಜನೆಗಳನ್ನು ಪಡೆದಿರುವ ಕುಟುಂಬಗಳ ಬಗ್ಗೆ ಮುಕ್ತವಾಗಿ ಮಾತನಾಡಲು ಕೇಂದ್ರ ಹಾಗೂ ರಾಜ್ಯ ಸಚಿವರು ಹಾಗೂ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆಗಮಿಸಲಿದ್ದಾರೆ. ಕಾರ್ಯಕ್ರಮದ ನಿಮಿತ್ತ ಜಿಲ್ಲಾಧಿಕಾರಿಗಳು,
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಶಾಸಕ ಪ್ರೀತಂ ಗೌಡ ಅವರ ನೇತೃತ್ವದಲ್ಲಿ ಎಲ್ಲಾ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸುತ್ತಿದ್ದು, ತಯಾರಿ ಬಗ್ಗೆ ಸಮಾಲೋಚನೆ ನಡೆಸಲಾಗಿದೆ. ಕಳೆದ ನಾಲ್ಕೈದು ವರ್ಷಗಳಿಂದ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಲಕ್ಷಾಂತರ ಜನ ರಾಜ್ಯ ಹಾಗೂ ಕೇಂದ್ರದ ವಿವಿಧ ಯೋಜನೆಗಳನ್ನು ಪಡೆದಿರುವವರ ಜೊತೆ ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು. ಸಮ್ಮೇಳನಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಗೃಹ ಸಚಿವರು, ಸಹಕಾರಿ ಸಚಿವರು, ಕೃಷಿ ಸಚಿವರು ಸೇರಿದಂತೆ ವಿವಿಧ ಖಾತೆಯ ಸಚಿವರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಕಾರ್ಯಕ್ರಮಕ್ಕೆ ಸರ್ಕಾರದ ವಿವಿಧ ಯೋಜನೆಗಳ ಫಲ ಪಡೆದಿರುವ ಎಲ್ಲಾ ಫಲಾನುಭವಿಗಳನ್ನು ಕರೆತರುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಕ್ಷೇತ್ರದ ಶಾಸಕ ಪ್ರೀತಂ ಜೆ. ಗೌಡ ಮಾತನಾಡಿ, ಹಾಸನ ಕ್ಷೇತ್ರದಲ್ಲಿ ಪ್ರವಾಸಿ ಮಂದಿರದ ನೂತನ ಕಟ್ಟಡ, ಆಸ್ಪತ್ರೆ ಕಟ್ಟಡ ಉದ್ಘಾಟನೆ, ಲೋಕಾರ್ಪಣೆ, ಟ್ರಾಫಿಕ್ ಸ್ಟೇಶನ್ ಉದ್ಘಾಟನೆ, ವಿದ್ಯಾರ್ಥಿ ನಿಲಯಗಳು ಸೇರಿದಂತೆ ತಮ್ಮ ಅವಧಿಯಲ್ಲಿ ಆಗಿರುವ ವಿವಿಧ ಕಾಮಗಾರಿಗಳ ಉದ್ಘಾಟನೆ, ಹಾಗೂ ನೂತನ ಕಟ್ಟಡಗಳ ಲೋಕಾರ್ಪಣೆ ಮಾಡಲು ಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು. ಆಯಾ ಖಾತೆಗಳ ಸಚಿವರು ಆಗಮಿಸಿ ಕಾರ್ಯಕ್ರಮ ನಡೆಸಿ ಕೊಡಲಿದ್ದು, ಜಿಲ್ಲೆಯಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಕೋರಿದರು.