ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಹೌದು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ತಮ್ಮ ಸಹೋದರ ಡಿಕೆ ಸುರೇಶ್ಗೆ ಮತ ನೀಡುವಂತೆ ಮತದಾರರಿಗೆ ಬೆದರಿಕೆ ಹಾಕಿರುವ ಆರೋಪದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಬೆಂಗಳೂರು ದಕ್ಷಿಣ ಮತ್ತು ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಗಳ ಅಪಾರ್ಟ್ಮೆಂಟ್ ನಿವಾಸಿಗಳಿಗೆ ಕಾವೇರಿ ನೀರು ಸಂಪರ್ಕ,
ಸಿಎ ನಿವೇಶನ ಮತ್ತು ಹಕ್ಕುಪತ್ರ ಹಸ್ತಾಂತರಿಸಬೇಕಾದರೆ ಸುರೇಶ್ಗೆ ಮತ ನೀಡಬೇಕು ಎಂದು ಶಿವಕುಮಾರ್ ಹೇಳಿದ್ದಾರೆ ಎಂದು ಬಿಜೆಪಿ ದೂರಿನಲ್ಲಿ ಉಲ್ಲೇಖಿಸಿದೆ. ಎರಡು ವಿಧಾನಸಭಾ ಕ್ಷೇತ್ರಗಳು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುತ್ತವೆ.ಶಿವಕುಮಾರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದರ ಜೊತೆಗೆ ಕಾಂಗ್ರೆಸ್ನ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಅವರನ್ನು ತೆಗೆದುಹಾಕಬೇಕು ಎಂದು ಬಿಜೆಪಿ ಆಗ್ರಹಿಸಿದೆ.